ಕನ್ನಡ ಧ್ವಜಕ್ಕೆ ಅಧಿಕೃತ ಸ್ಥಾನಮಾನ: ಬೆಳಗಾವಿ ಅಧಿವೇಶನದಲ್ಲಿ ಕಾನೂನು ತರಲು ಸರ್ಕಾರ ಬದ್ಧ
- by Suddi Team
- November 1, 2026
- 23 Views
ಬೆಂಗಳೂರು: ಕನ್ನಡ ಕನ್ನಡಿಗರ ಭಾವನೆಯ ಹೆಗ್ಗುರುತಾಗಿರುವ ಕೆಂಪು-ಹಳದಿ ಬಾವುಟಕ್ಕೆ ಅಧಿಕೃತ ನಾಡಧ್ವಜದ ಸ್ಥಾನಮಾನ ನೀಡಲು ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಈ ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಶಾಸಕರು ಹಾಗೂ ಸಾರ್ವಜನಿಕ ಚರ್ಚೆಗೆ ಮುಕ್ತ ಅವಕಾಶ ಕಲ್ಪಿಸಿ, ಕಾನೂನು ಚೌಕಟ್ಟು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ.
71ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕಂಠೀರವ ಕ್ರೀಡಾಂಗಣ, ವಿಧಾನಸೌಧದ ಭುವನೇಶ್ವರಿ ಪ್ರತಿಮೆ ಹಾಗೂ ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಖಾಸಗಿ ಸಂಸ್ಥೆಗಳಿಗೂ ಕನ್ನಡ ಧ್ವಜ ಕಡ್ಡಾಯ:
ರಾಷ್ಟ್ರಧ್ವಜದ ಗೌರವ ಮತ್ತು ನಿಯಮಗಳಿಗೆ ಯಾವುದೇ ಧಕ್ಕೆ ಬಾರದಂತೆ ಕನ್ನಡ ಧ್ವಜದ ಬಳಕೆ ಹಾಗೂ ಸಂರಕ್ಷಣೆಗೆ ಕಾನೂನು ತಜ್ಞರೊಂದಿಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಅನುದಾನಿತ ಸಂಸ್ಥೆಗಳು ಮಾತ್ರವಲ್ಲದೆ, ಖಾಸಗಿ ಸಂಸ್ಥೆಗಳ ಮೇಲೂ ಕನ್ನಡ ಧ್ವಜ ಹಾರಿಸುವುದನ್ನು ಕಡ್ಡಾಯಗೊಳಿಸಲು ಇದೇ ತಿಂಗಳು ಸರ್ಕಾರಿ ಆದೇಶ ಹೊರಡಿಸಲು ಸಿದ್ಧತೆ ನಡೆದಿದೆ ಎಂದು ಅವರು ತಿಳಿಸಿದರು.
ಶಿಕ್ಷಣ ಕ್ಷೇತ್ರಕ್ಕೆ ಹೊಸ ಉತ್ತೇಜನ: ಶೇ. 7 ಮೀಸಲಾತಿ
ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಓದಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ವೃತ್ತಿಪರ ಶಿಕ್ಷಣ ಸುಲಭವಾಗಿ ಸಿಗುವಂತಾಗಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 1 ರಿಂದ 10ನೇ ತರಗತಿ ಹಾಗೂ ಪಿಯುಸಿಯನ್ನು ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಮುಗಿಸಿದ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಮತ್ತು ವೈದ್ಯಕೀಯ (ಮೆಡಿಕಲ್) ಶಿಕ್ಷಣದ ಪ್ರವೇಶಾತಿಯಲ್ಲಿ ಶೇಕಡಾ 7 ರಷ್ಟು ವಿಶೇಷ ಮೀಸಲಾತಿಯನ್ನು ಕಲ್ಪಿಸಲಾಗಿದೆ ಎಂದು ಅವರು ವಿವರಿಸಿದರು.
6ನೇ ತರಗತಿಯಿಂದಲೇ ಎಐ ತರಬೇತಿ:
ಡಿಜಿಟಲ್ ಯುಗದಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನು ಜಾಗತಿಕ ಸ್ಪರ್ಧೆಗೆ ಸಜ್ಜುಗೊಳಿಸಲು ಸರ್ಕಾರಿ ಶಾಲೆಗಳಲ್ಲಿ 6ನೇ ತರಗತಿಯಿಂದ 12ನೇ ತರಗತಿಯವರೆಗೆ ಕೃತಕ ಬುದ್ಧಿಮತ್ತೆ (AI) ಮತ್ತು ಕೌಶಲ್ಯಾಧಾರಿತ ಶಿಕ್ಷಣವನ್ನು ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಸಿಎಸ್ಆರ್ (CSR) ನಿಧಿ ಬಳಕೆಯ ಮೂಲಕ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಹೊಸ ರೂಪ ನೀಡಲಾಗುತ್ತಿದ್ದು, ಈಗಾಗಲೇ 15 ಸಾವಿರ ಶಿಕ್ಷಕರ ನೇಮಕಾತಿಗೆ ಆದೇಶಿಸಲಾಗಿದೆ. ರಾಜ್ಯದಲ್ಲಿ 25,498 ದ್ವಿಭಾಷಾ ಶಾಲೆಗಳನ್ನು ಆರಂಭಿಸಿ, 250 ಸರ್ಕಾರಿ ಶಾಲೆಗಳಲ್ಲಿ ಆಧುನಿಕ ವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕನ್ನಡ ಕೇವಲ ಆಡಳಿತ ಭಾಷೆಯಾಗದೆ ಪ್ರತಿಯೊಬ್ಬರ ಹೃದಯದ ಭಾಷೆಯಾಗಬೇಕು. ಜಾಗತಿಕವಾಗಿ ತಂತ್ರಜ್ಞಾನ ಬೆಳೆದರೂ ನಮ್ಮ ಮಕ್ಕಳು ದೈನಂದಿನ ಜೀವನದಲ್ಲಿ ಕನ್ನಡವನ್ನು ಬಳಸುವ ಮೂಲಕ ಭಾಷೆಯ ಬೇರುಗಳನ್ನು ಗಟ್ಟಿಗೊಳಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದರು.
Related Articles
Thank you for your comment. It is awaiting moderation.


Comments (0)