ಬೆಂಗಳೂರಿನಿಂದಾಚೆ ಹೂಡಿಕೆ ಮಾಡಿ: ಹೂಡಿಕೆದಾರರಿಗೆ ಸಿಎಂ ಮನವಿ!
- by Suddi Team
- August 3, 2018
- 74 Views

ಬೆಂಗಳೂರು: ಹೂಡಿಕೆದಾರರು ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಉದ್ಯಮಗಳನ್ನು ಸ್ಥಾಪಿಸಲು ಮುಂದಾಗುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದರು.
ಬೆಂಗಳೂರು ಟೆಕ್ ಸಮ್ಮಿಟ್ 2018ರ ಪೂರ್ವಭಾವಿಯಾಗಿ ಹಮ್ಮಿಕೊಂಡಿದ್ದ ಐಟಿ ಬಿಟಿ ಕಂಪೆನಿ ಸಿಇಒಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ರಾಜ್ಯ ಸರ್ಕಾರವು ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಉದ್ಯಮಗಳ ಸ್ಥಾಪನೆಯ ಮೂಲಕ ಗ್ರಾಮೀಣ ಯುವಕರಿಗೆ ಉದ್ಯೋಗ ಕಲ್ಪಿಸಲು ಉತ್ಸುಕವಾಗಿದೆ. ಈ ನಗರಗಳಲ್ಲಿ ಹೂಡಿಕೆ ಮಾಡುವ ಕಂಪೆನಿಗಳಿಗೆ ಎಲ್ಲ ರೀತಿಯ ನೆರವು ನೀಡಲು ಸಿದ್ಧವಿದೆ
ಕೌಶಲ್ಯ ತರಬೇತಿಗೂ ಆದ್ಯತೆ ನೀಡಲಿದೆ ಈ ವರ್ಷ ಆಯವ್ಯಯದಲ್ಲಿ ಇದಕ್ಕಾಗಿ 500 ಕೋಟಿ ರೂ. ಮೀಸಲಿಡಲಾಗಿದೆ. ಈ ಭಾಗದಲ್ಲಿ ಉದ್ಯಮಗಳ ಸ್ಥಾಪನೆ ಮೂಲಕ ಉದ್ಯೋಗ ಸೃಷ್ಟಿಗೆ ನೆರವಾಗಿ ಎಂದು ಕರೆ ನೀಡಿದರು.
ವಿವಿಧ ಕಂಪೆನಿಗಳ ಮುಖ್ಯಸ್ಥರ ಸಲಹೆಗಳನ್ನು ಆಲಿಸಿದ ಮುಖ್ಯಮಂತ್ರಿಯವರು, ಸರ್ಕಾರವು ನಿಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಿದ್ಧವಿದೆ. ಕೈಗಾರಿಕೆಗಳ ಸ್ಥಾಪನೆಗೆ ಇರುವ ತೊಡಕುಗಳನ್ನು ನಿವಾರಿಸಲು ಮುಖ್ಯಮಂತ್ರಿಗಳ ಕಚೇರಿಯಲ್ಲಿಯೇ ವಿಶೇಷ ಘಟಕ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ರಾಜ್ಯ ಸರ್ಕಾರವು ಈ ವರ್ಷ ಆಯವ್ಯಯದಲ್ಲಿ ಘೋಷಿಸಿದಂತೆ ಚೀನಾದೊಂದಿಗೆ ಆರೋಗ್ಯಕರ ಸ್ಪರ್ಧೆ ಎಂಬ ಯೋಜನೆಯಡಿ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್ಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. ಬೀದರ್ನಲ್ಲಿ ಕೃಷಿಗೆ ಪೂರಕ ಯಂತ್ರೋಪಕರಣಗಳ ತಯಾರಿಕೆ, ಕಲಬುರಗಿಯಲ್ಲಿ ಸೌರ ವಿದ್ಯುತ್ ಉಪಕರಣಗಳ ಉದ್ಯಮ, ಕೊಪ್ಪಳದಲ್ಲಿ ಆಟಿಕೆಗಳ ತಯಾರಿಕೆ, ಬಳ್ಳಾರಿಯಲ್ಲಿ ವಸ್ತ್ರೋದ್ಯಮ, ಚಿತ್ರದುರ್ಗದಲ್ಲಿ ಎಲ್ಇಡಿ ಹೀಗೆ ವಿವಿಧ ಜಿಲ್ಲೆಗಳಲ್ಲಿ ವಿವಿಧ ಕೈಗಾರಿಕೆಗಳ ಕ್ಲಸ್ಟರ್ ಸ್ಥಾಪಿಸುತ್ತಿದೆ. ಈ ನಿಟ್ಟಿನಲ್ಲಿ ವಿವಿಧ ಉದ್ಯಮಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರೋತ್ಸಾಹ ನೀಡಲಾಗುವುದು ಎಂದು ಹೇಳಿದರು.
ಕರ್ನಾಟಕ ಇನ್ನೋವೇಷನ್ ಹಬ್ ಎಂದು ಹೆಸರಾಗಿದೆ. ಈ ವಲಯಕ್ಕೆ ಬೆಂಬಲ ನೀಡಲು, ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಕರ್ನಾಟಕ ಇನ್ನೊವೇಷನ್ ಅಥಾರಿಟಿಯನ್ನು ಸ್ಥಾಪಿಸುವ ಬಗ್ಗೆ ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ತಿಳಿಸಿದರು.
ಬೃಹತ್ ಕೈಗಾರಿಕೆ, ಐಟಿ ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕೆ.ಜೆ. ಜಾರ್ಜ್ ಅವರು ಮಾತನಾಡಿ, ಸರ್ಕಾರ ಐಟಿ ಬಿಟಿ ಉದ್ಯಮಗಳ ಬೆಳವಣಿಗೆಗೆ ಎಲ್ಲ ರೀತಿಯ ಬೆಂಬಲ ನೀಡಲಿದೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, ರಾಜ್ಯ ಸರ್ಕಾರವು ಗ್ರಾಮೀಣ ಉದ್ಯಮಶೀಲತೆ ಅಭಿವೃದ್ಧಿಗೆ ಆದ್ಯತೆ ನೀಡಲಿದೆ. ಇದಕ್ಕೆ ಐಟಿ ಬಿಟಿ ವಲಯದ ದಿಗ್ಗಜರು ಬೆಂಬಲ ನೀಡುವಂತೆ ಮನವಿ ಮಾಡಿದರು.
ಸಣ್ಣ ಕೈಗಾರಿಕಾ ಸಚಿವ ಶ್ರೀನಿವಾಸ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಐಟಿ ಬಿಟಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಕರ್ನಾಟಕ ಐಟಿ ವಿಷನ್ ಗ್ರೂಪ್ನ ಅಧ್ಯಕ್ಷ, ಕ್ರಿಸ್ ಗೋಪಾಲಕೃಷ್ಣನ್ ಮೊದಲಾದವರು ಉಪಸ್ಥಿತರಿದ್ದರು.
Related Articles
Thank you for your comment. It is awaiting moderation.
Comments (0)