ಅತಿವೃಷ್ಟಿ ಸಮೀಕ್ಷೆಗೆ ಬರುವಂತೆ ಪ್ರಧಾನಿ ಮೋದಿಗೆ ಆಗ್ರಹಿಸಿದ ಸಿದ್ದು

ಬೆಂಗಳೂರು: ಅತಿವೃಷ್ಟಿ ಕುರಿತು ಕೇಂದ್ರ ಸರ್ಕಾರ ರಾಜ್ಯದಿಂದ ಮಾಹಿತಿ ಪಡೆದಿದೆ. ಆದ್ರೆ, ಕಳೆದ ಬಾರಿಯ ಪರಿಹಾರವನ್ನೆ ಇನ್ನೂ ನೀಡಿಲ್ಲ ಈ ವರ್ಷದ ಪರಿಹಾರ ಯಾವಾಗ ನೀಡ್ತಾರೆ ಅನ್ನೋ ಅನುಮಾನಗಳು ವ್ಯಕ್ತವಾಗಿವೆ. ಈ ಕುರಿತು ಟ್ವೀಟ್ ಮಾಡಿರೋ ವಿಪಕ್ಷ ನಾಯಕ ಸಿದ್ದರಾಮಯ್ಯ, ಅತಿವೃಷ್ಟಿ ಬಗ್ಗೆ ಪ್ರಧಾನಿ ಮೋದಿ ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ. ಕಳೆದ ಬಾರಿ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಈ ಬಾರಿಯಾದರೂ ಎಚ್ಚೆತ್ತುಕೊಂಡಿದ್ದಾರೆ ಅಂತಾ ಕಾಲೆಳೆದಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ 1,00,000 ಕೋಟಿ ರೂಪಾಯಿ, ರಾಜ್ಯ ಸರ್ಕಾರದ ವರದಿ ಪ್ರಕಾರ ಆದ ನಷ್ಟ 50,000 ಕೋಟಿ ರೂಪಾಯಿ, ಪರಿಹಾರ ಕೇಳಿದ್ದು 35,000 ಕೋಟಿ ರೂಪಾಯಿ. ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ1860 ಕೋಟಿ ರೂಪಾಯಿ ಮಾತ್ರ. ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ. ಕಳೆದ ವರ್ಷ ಸಿಎಂ ಬಿಎಸ್ವೈ ಅತಿವೃಷ್ಟಿಯ ವರದಿ ಕಳಿಸಿರುವುದು ಆಗಸ್ಟ್ ವರೆಗಿನ ಹಾನಿ ಬಗ್ಗೆ ಮಾತ್ರ. ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅತಿವೃಷ್ಟಿ ವರದಿ ಕಳಿಸದೆ ಸರ್ಕಾರ ನೊಂದ ಜನತೆಗೆ ಮೋಸ ಮಾಡಿದೆ. ಈ ಬಾರಿ ಪರಿಹಾರವನ್ನು ಕೇಳುವಾಗ ಇದನ್ನು ಪ್ರಧಾನಿ ಅವರ ಗಮನಕ್ಕೆ ತರಬೇಕು ಅಂತಾ ಒತ್ತಾಯಿಸಿದ್ದಾರೆ.

ಇನ್ನೂ ರಾಜ್ಯದ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳಿಸಬೇಕು ಅಂತಾ ಬೇಡಿಕೆ ಇಟ್ಟಿದ್ದಾರೆ. ಈ ವರೆಗಿನ ಅನುಭವದ ಪ್ರಕಾರ ರಾಜ್ಯದ ಹಿತಾಸಕ್ತಿ ರಕ್ಷಣೆಯ ಪರ ಗಟ್ಟಿಯಾಗಿ ನಿಂತು ಪಿಎಂ ಮೋದಿ ಅವರ ಜೊತೆ ಮಾತನಾಡಿ ಹೆಚ್ಚು ಪರಿಹಾರ ಪಡೆಯುವ ಶಕ್ತಿ ಸಿಎಂ ಬಿಎಸ್ವೈ ಇಲ್ಲವೇ ಸಚಿವರಿಗಿಲ್ಲ.ಇದಕ್ಕಾಗಿ, ಹೆಚ್ಚಿನ ಪರಿಹಾರ ಕೋರಲು ಸರ್ವಪಕ್ಷಗಳ ನಿಯೋಗವನ್ನು ದೆಹಲಿಗೆ ಕೊಂಡೊಯ್ಯಬೇಕು ಎಂದು ಆಗ್ರಹಿಸಿದ್ದಾರೆ.

Related Articles

Comments (0)

Leave a Comment