ಹುಲಿಗಳ ಸಾವು ಕುರಿತು ಮೂರು ದಿನದಲ್ಲಿ ವರದಿ ಸಲ್ಲಿಸಿ: ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು ಪ್ರಕರಣ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ನೇತೃತ್ವದ ತನಿಖಾ ತಂಡ ರಚಿಸಿ, 3 ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯವಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸಲು ಆದೇಶ ನೀಡಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ಈಶ್ವರ ಖಂಡ್ರೆ ಬೇಸರ ಹೊರಹಾಕಿದ್ದಾರೆ.

ಕೂಡಲೇ ಪಿಸಿಸಿಎಫ್ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದ ಕಿಡಿಗೇಡಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು 3 ದಿನಗಳ ಒಳಗಾಗಿ ವರದಿಯನ್ನು ಕಚೇರಿಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.

Related Articles

Comments (0)

Leave a Comment