- ಮುಖ್ಯ ಮಾಹಿತಿ
- ರಾಜಕೀಯ
- Like this post: 0
ಬೆಂಗಳೂರು ಗ್ರಾಮಾಂತರ ಇನ್ಮುಂದೆ ಬೆಂಗಳೂರು ಉತ್ತರ ಜಿಲ್ಲೆ; ಮರುನಾಮಕರಣಕ್ಕೆ ಸಂಪುಟ ಅಸ್ತು
- by Suddi Team
- July 2, 2025
- 399 Views

ಬೆಂಗಳೂರು: ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣಗೊಂಡ ಬೆನ್ನಲ್ಲೇ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರನ್ನೂ ಬದಲಾವಣೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಬೆಂಗಳೂರು ಉತ್ತರ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚಿಕ್ಕಬಳ್ಳಾಪುರ ಸುತ್ತಮುತ್ತ ವ್ಯಾಪ್ತಿಗೆಸೇರಿದ ಪ್ರದೇಶಗಳ ಅಭಿವೃದ್ಧಿ ಕಾರ್ಯಗಳ ಅನುಮೋದನೆಗೆ ಆದ್ಯತೆ ನೀಡಲಾಯಿತು.
ಸಭೆ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಿಎಂ, ಈ ಸಚಿವ ಸಂಪುಟ ಸಭೆಯಲ್ಲಿ ನಾವು 3,400 ಕೋಟಿ ರೂ.ಗಳಿಗೆ ಅನುಮೋದನೆ ನೀಡಿದ್ದೇವೆ. ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ ಅನುಮೋದನೆ ನೀಡಲಾಗಿದೆ. ಅತ್ಯಂತ ಮುಖ್ಯವಾಗಿ ಕುಡಿಯುವ ನೀರಿನ ಯೋಜನೆಗಳು ಅದರಲ್ಲೂ ಮುಖ್ಯವಾಗಿ ಎತ್ತಿನ ಹೊಳೆ ಯೋಜನೆಯ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ನಾವು ಎತ್ತಿನಹೊಳೆ ಯೋಜನೆಯನ್ನು ವೇಗಗೊಳಿಸಲು ಹಾಗೂ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಹಳ್ಳಿಗಳಿಗೆ ಹರಿಸಲು ನಿರ್ದೇಶನಗಳನ್ನು ನೀಡಲಾಯಿತು ಎಂದರು.
ಸಭೆಯಲ್ಲಿ ಹಲವು ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಿದ್ದೇವೆ. ಬಾಗೇಪಲ್ಲಿ ಪಟ್ಟಣಕ್ಕೆ ಭಾಗ್ಯನಗರ ಎಂದು ಹೆಸರಿಡಲು ತೀರ್ಮಾನಿಸಿದ್ದೇವೆ. ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾಲಯ ಎಂದು ಮರು ನಾಮಕರಣ ಮಾಡಲು ತೀರ್ಮಾನಿಸಿದ್ದೇವೆ ಎಂದರು.
ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ 31 ವಿಷಯಗಳಿಗೆ 2,525 ಕೋಟಿ ರೂ.ಗಳನ್ನು ಒದಗಿಸುವ ಕಾಮಗಾರಿ/ ಯೋಜನೆಗಳ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು. ಶಿಕ್ಷಣಕ್ಕೆ 1,627.25 ಕೋಟಿ ರೂ. ನೀಡಿದ್ದೇವೆ. ಇದರಲ್ಲಿ ಕಾಲೇಜು, ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಒದಗಿಸುತ್ತಿದ್ದೇವೆ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐಎಎಸ್, ಐಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಎರಡು ವಸತಿ ನಿಲಯ ನಿರ್ಮಿಸಲು ತೀರ್ಮಾನಿಸಿದ್ದೇವೆ ಎಂದರು.
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ 1,125.25 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ ನೀಡಿದ್ದೇವೆ. ನೀರಾವರಿ ಯೋಜನೆಗಳಿಗೆ 1,154 ಕೋಟಿ ನೀಡಿದ್ದೇವೆ. ಇದರಲ್ಲಿ 237 ಕೋಟಿ ರೂ. ಗಳನ್ನು ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಿ ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕಿನ 164 ಕೆರೆಗಳಿಗೆ ತುಂಬಿಸುವ ಯೋಜನೆಗೆ ಅನುಮೋದನೆ ನೀಡಿದ್ದೇವೆ. ಈ ಭಾಗದಲ್ಲಿ ಅತಿ ಹೆಚ್ಚಾಗಿ ಗುಣಮಟ್ಟದ ಹೂ ಬೆಳೆಯುತ್ತಾರೆ. ಆದ್ದರಿಂದ, ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರವನ್ನು 10 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಅನುಮೋದನೆ ಮಾಡಲಾಗಿದೆ. ಇದರ ಜತೆಗೆ ಚಿಕ್ಕಬಳ್ಳಾಪುರದಲ್ಲಿ ಎಪಿಎಂಸಿ ವತಿಯಿಂದ 141.5 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ ಎಂದರು.
ಆರೋಗ್ಯ ಇಲಾಖೆ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 46 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಹಾಗೂ 21.40 ಕೋಟಿ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿಯಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಎಂಆರ್ಐ ಯಂತ್ರಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಹಾಗೂ 56 ಕೋಟಿ ರೂ. ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಪಿಎಚ್ಸಿ ಹಾಗೂ ಮಂಚೇನಹಳ್ಳಿಯ ಆಸ್ಪತ್ರೆಗಳನ್ನು ಉನ್ನತೀಕರಿಸಲು ಹಾಗೂ ಹೆಚ್ಚುವರಿ ಕಾಮಗಾರಿ ತೆಗೆದುಕೊಳ್ಳಲು ತೀರ್ಮಾನಿಸಿದ್ದೇವೆ. ಒಟ್ಟಾರೆ 123 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ಸಂಬಂಧಿತ ಚಟುವಟಿಕೆಗೆ ಅನುಮತಿ ನೀಡಲಾಗಿದೆ ಎಂದರು.
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಎಚ್.ಕೆ. ಪಾಟೀಲ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದರು.
Related Articles
Thank you for your comment. It is awaiting moderation.
Comments (0)