ಆಸ್ಪತ್ರೆಯಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮತ್ತೆ ದಾಖಲು: ಶರದ್ ಪವಾರ್ಗೆ ಅನಾರೋಗ್ಯ
- by Suddi Loka
- November 5, 2026
- 130 Views
ಮುಂಬೈ: ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಹಾಗೂ ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುಣೆಯ ಆಸ್ಪತ್ರೆಯಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಿಸಿರುವುದು ಅವರ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಆತಂಕ ಮೂಡಿಸಿದೆ.
ಶರದ್ ಪವಾರ್ ಅವರ ಪುತ್ರಿ ಹಾಗೂ ಬಾರಾಮತಿ ಲೋಕಸಭಾ ಕ್ಷೇತ್ರದ ಸಂಸದೆ ಸುಪ್ರಿಯಾ ಸುಳೆ ಅವರು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ ತಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

85 ವರ್ಷದ ಶರದ್ ಪವಾರ್ ಅವರು ಕೆಮ್ಮು ಮತ್ತು ಎದೆನೋವಿನ ಸಮಸ್ಯೆಯಿಂದಾಗಿ ನವೆಂಬರ್ 2ರಂದು ಪುಣೆಯ ರೂಬಿ ಹಾಲ್ ಕ್ಲಿನಿಕ್ಗೆ ದಾಖಲಾಗಿದ್ದರು. ಅಲ್ಲಿ ವೈದ್ಯರು ಅವರಿಗೆ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ ಚಿಕಿತ್ಸೆ ನೀಡುತ್ತಿದ್ದರು. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಸುಪ್ರಿಯಾ ಸುಳೆ ಈ ಹಿಂದೆ ಮಾಹಿತಿ ನೀಡಿದ್ದರು.
ಬುಧವಾರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಆದರೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮತ್ತೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದಕ್ಕೂ ಮುನ್ನ ರೂಬಿ ಹಾಲ್ ಕ್ಲಿನಿಕ್ನಿಂದ ಬಿಡುಗಡೆಯಾದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶರದ್ ಪವಾರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದರು. ಈ ವೇಳೆ ಅವರ ಆರೋಗ್ಯದ ಬಗ್ಗೆ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದರು ಎಂದು ಪವಾರ್ ಅವರ ಆಪ್ತ ಸಹಾಯಕರು ತಿಳಿಸಿದ್ದಾರೆ.
ಸದ್ಯ ಶರದ್ ಪವಾರ್ ಅವರು ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Comments (0)