ಅಸ್ಸಾಂನಲ್ಲಿ ಭೀಕರ ಅಪಘಾತ; 23 ಮಂದಿ ದುರ್ಮರಣ

ಗುವಾಹಟಿ: ಅಸ್ಸಾಂನ ಕಾಜಿರಂಗ ಸಮೀಪದ ರೊಂಗಾಜನ್ ಪ್ರದೇಶದಲ್ಲಿ ಮಿನಿ ಬಸ್ ಮತ್ತು ಕಂಟೇನರ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 23 ಮಂದಿ ಮೃತಪಟ್ಟಿದ್ದಾರೆ.

ಬೊಕಾಖಾಟ್‌ನಿಂದ ನಗಾಂವ್‌ಗೆ ತೆರಳುತ್ತಿದ್ದ ಮಿನಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಹಲವು ಪ್ರಯಾಣಿಕರು ಅವಶೇಷಗಳ ನಡುವೆ ಸಿಲುಕಿಕೊಂಡಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಗಾಯಾಳುಗಳನ್ನು ಕೊಹೊರಾ ಮಾದರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಿನಿ ಬಸ್ ಅತಿವೇಗದಲ್ಲಿ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಗೆ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಚಿವ ಅತುಲ್ ಬೋರಾ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ.

Related Articles

Comments (0)