ಹಾಸನದಲ್ಲಿ ಗಣೇಶ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್,ಹಲವರ ಸಾವು; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ
- by Suddi Team
 - September 12, 2025
 - 127 Views
 
                                                          ಹಾಸನ/ಬೆಂಗಳೂರು: ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಸಾಗುತ್ತಿದ್ದ ಜನರ ಗುಂಪಿನ ಮೇಲೆ ಕ್ಯಾಂಟರ್ ನುಗ್ಗಿದ ಪರಿಣಾಮ ಕೆಲವರು ಧಾರುಣವಾಗಿ ಮೃತಪಟ್ಟಿದ್ದು 20 ಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ.ಮೃತರ ಕುಟುಂಬಕ್ಕೆ ಸರ್ಕಾರ ತಲಾ ಐದು ಪಕ್ಷ ಪರಿಹಾರ ಘೋಷಿಸಿದ್ದು ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಪ್ರಕಟಿಸಿದೆ.
ಹಾಸನದ ಮೊಸಳೆಹೊಸಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮೊಸಳೆಹೊಸಳ್ಳಿಯ ರಾಷ್ಟ್ರೀಯ ಹೆದ್ದಾರಿ 373ರ ಚತುಷ್ಪಥ ರಸ್ತೆಯ ಒಂದು ಬದಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆಗೆ ಪೊಲೀಸರ ಅನುಮತಿಯೊಂದಿಗೆ ಅವಕಾಶ ನೀಡಲಾಗಿತ್ತು.ಅದರಂತೆ ಮೆರವಣಿಗೆ ಸಾಗುತ್ತಿತ್ತು ಆದರೆ ಎಲ್ಲರೂ ಭಕ್ತಿಪರಾವಶರಾಗಿದ್ದ ವೇಳೆ ವೇಗವಾಗಿ ಬಂದ ಮಹಾರಾಷ್ಟ್ರ ಮೂಲದ ಕ್ಯಾಂಟರ್ ಮೆರವಣಿಗೆ ಸಮೀಪದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದು ನಂತರ ಮೆರವಣಿಗೆಯಲ್ಲಿ ಸಾಗುತ್ತಿದ್ದ ನೂರಾರು ಜನರ ಮೇಲೆಯೇ ಏಕಾಏಕಿ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಕೆಲವರು ಸಾವನ್ನಪ್ಪಿದ್ದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೆಲವರು ಸಾವನ್ನಪ್ಪಿದ್ದಾರೆ.(ನಿಖರ ಸಂಖ್ಯೆ ಅಧಿಕೃತವಾಗಿ ಪ್ರಕಟವಾಗಿಲ್ಲ) 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಅದರಲ್ಲಿ10 ಮಂದಿ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇನ್ನು ಮೃತರಿಗೆ ಸಂತಾಪ ಸೂಚಿಸಿರುವ ಸರ್ಕಾರ ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ನೀಡುವ ಘೋಷಣೆ ಮಾಡಿದ್ದು, ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಪ್ರಕಟಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ,ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು.ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ,ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತ ಅತ್ಯಂತ ಆಘಾತಕಾರಿಯಾಗಿದ್ದು, ಈ ಘೋರ ದುರ್ಘಟನೆಯ ಬಗ್ಗೆ ಕೇಳಿ ತುಂಬಾ ದುಃಖವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಕ್ಕೆ 5 ಲಕ್ಷ ರೂ. ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
Related Articles
                            Thank you for your comment. It is awaiting moderation.
                        
                                        
                    
                    
                
                            
                                            
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
Comments (0)