ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ; ಸಿಎಂಗೆ ವರದಿ ಸಲ್ಲಿಸಿದ ನ್ಯಾ. ಕುನ್ಹಾ ಆಯೋಗ..!
- by Suddi Team
- July 11, 2025
- 61 Views

ಬೆಂಗಳೂರು: ಆರ್ಸಿಬಿ ವಿಜಯೋತ್ಸವ ಆಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರ ಅಧ್ಯಕ್ಷತೆಯ ಏಕವ್ಯಕ್ತಿ ಆಯೋಗ ಇಂದು ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿತು.
ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಗೆ ಭೇಟಿ ನೀಡಿದ ನ್ಯಾ. ಕುನ್ಹಾ ಅವರು ಎರಡು ಸಂಪುಟದಲ್ಲಿ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ವರದಿ ಸ್ವೀಕರಿಸಿ ಮಾತನಾಡಿದ ಸಿಎಂ, ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ವರದಿಯಲ್ಲಿ ಮಾಡಿರುವ ಶಿಫಾರಸುಗಳ ಬಗ್ಗೆ ಚರ್ಚಿಸಿದ ನಂತರ ಸಂಪುಟ ನಿರ್ಧಾರ ಮಾಡಲಿದೆ. ನಾನು ವರದಿಯನ್ನು ಪೂರ್ಣವಾಗಿ ಓದಿಲ್ಲ. ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ಪೊಲೀಸರ ಅಮಾನತನ್ನು ಸಿಎಟಿಯವರು ವಿರೋಧಿಸಿ ಆದೇಶಿಸಿರುವ ಬಗ್ಗೆ ಆಯೋಗದ ವರದಿಯಲ್ಲಿ ಪ್ರಸ್ತಾಪಿಸಲಾಗಿದೆಯೇ ಎಂಬುದರ ಬಗ್ಗೆ ಗೊತ್ತಿಲ್ಲ. ಆದರೆ,ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕಾಲ್ತುಳಿತ ಪ್ರಕರಣದ ವರದಿಯಲ್ಲಿ ಏನಿದೆ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
“ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ನ್ಯಾಯಾಂಗ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿ ಏನಿದೆ ಎಂದು ನನಗೆ ತಿಳಿದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಪ್ರಕರಣದ ತನಿಖಾ ವರದಿ ಮುಖ್ಯಮಂತ್ರಿಗಳಿಗೆ ಸಲ್ಲಿಕೆಯಾಗಿದೆ ಎಂದು ಕೇಳಿದಾಗ, “ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕುನ್ಹಾ ಅವರ ವರದಿ ಸಲ್ಲಿಕೆಯಾಗುತ್ತಿದೆ ಎಂದಷ್ಟೇ ಗೊತ್ತು. 10ನೇ ತಾರೀಕಿನ ಒಳಗೆ ವರದಿ ನೀಡುವುದಾಗಿ ಹೇಳಿದ್ದರು. ನನಗೂ ಸಮನ್ಸ್ ನೀಡಿದ್ದರು. ನಾನು ವಿಡಿಯೋ ಕಾನ್ಫರೆನ್ಸ್ ಮೂಲಕ ನನ್ನ ಹೇಳಿಕೆ ನೀಡಿದ್ದೆ. ಅವರು ವರದಿ ನೀಡಿರುವುದು ಸಂತೋಷ. ಈ ವರದಿ ನೋಡದೇ ನಾನು ಏನನ್ನೂ ಹೇಳಲು ಸಾಧ್ಯವಿಲ್ಲ. ನಾವು ಪ್ರಕರಣದಲ್ಲಿ ನ್ಯಾಯಾಂಗ ತನಿಖೆ ನಡೆಸಿದ್ದು, ವರದಿಯಲ್ಲಿ ಏನಿದೆ ಎಂದು ನೋಡೋಣ, ಚರ್ಚೆ ಮಾಡೋಣ” ಎಂದು ತಿಳಿಸಿದರು.
Related Articles
Thank you for your comment. It is awaiting moderation.
Comments (0)