- ಮುಖ್ಯ ಮಾಹಿತಿ
- ರಾಜ್ಯ
- Like this post: 0
ಜಾತಿಗಣತಿ ಸಮೀಕ್ಷಾ ಕರ್ತವ್ಯದಲ್ಲಿ ಪಾಲ್ಗೊಳ್ಳದ ನೌಕರರ ಮೇಲೆ ಶಿಸ್ತು ಕ್ರಮ; ಸಚಿವ ಸಂಪುಟ ನಿರ್ಧಾರ
- by Suddi Team
- September 25, 2025
- 80 Views

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಳ್ಳಲಾಗಿರುವ ಈ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಟ್ಟು ಸಮೀಕ್ಷಾ ಕರ್ತವ್ಯದಲ್ಲಿ ಪಾಲ್ಗೊಳ್ಳದ ನೌಕರರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ನಡೆದಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಕುರಿತು ವಿಷಯ ಪ್ರಸ್ತಾಪವಾಯಿತು. ನಿರೀಕ್ಷಿತ ಮಟ್ಟದಲ್ಲಿ ಗಣತಿಯಾಗದಿರುವುದಕ್ಕೆ ಸಿಬ್ಬಂದಿ ಗೈರಿನ ಕಾರಣವನ್ನು ಗಂಭೀರವಾಗಿ ಪರಿಗಣಿಸಿ ಗೈರಾಗುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಪ್ರಸ್ತಾಪಕ್ಕೆ ಸಂಪುಟ ಸಮ್ಮತಿ ನೀಡಿತು.
ಸಚಿವ ಸಂಪುಟದ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಚಿವ ಸಂಪುಟದ ನಿರ್ಣಯಗಳ ವಿವರಗಳನ್ನು ನೀಡಿದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಳ್ಳಲಾಗಿರುವ ಈ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿ/ನೌಕರರು ಸಮೀಕ್ಷಾ ಕಾರ್ಯಕ್ಕೆ ಹಾಜರಾಗದೇ ಮತ್ತು ಕರ್ತವ್ಯಗಳನ್ನು ನಿರ್ವಹಿಸದೇ ಇರುವಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಬೆಂಗಳೂರು ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಅಧಿಕಾರ ಪ್ರಾಯೋಜಿಸಲಾಗಿದೆ ಎಂದು ತಿಳಿಸಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕಾಗಿ ಗಣತಿದಾರರಾಗಿ ನಿಯೋಜಿಸಲ್ಪಡುವ ಸರ್ಕಾರ, ನಿಗಮ/ಮಂಡಳಿಗಳ ಅಧಿಕಾರಿ/ ನೌಕರರುಗಳ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳು, 2021ರಡಿ ಹಾಗೂ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರನ್ವಯ ಶಿಸ್ತುಕ್ರಮ ಮತ್ತು ದಂಡನೆ ವಿಧಿಸುವ ಅಧಿಕಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಪ್ರತ್ಯಾಯೋಜಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.ಅದಕ್ಕೆ ಸಂಪುಟ ಒಪ್ಪಿಗೆ ನೀಡಿದೆ ಎಂದರು.
ರಾಜ್ಯದಲ್ಲಿ ನಡೆದಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಕುರಿತು ಕೆಲವು ನಿರ್ದೇಶನಗಳನ್ನು ನೀಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ದಿನಾಂಕ:27.09.2025) ರಂದು ಮುಂಜಾನೆ 11.30 ಗಂಟೆಗೆ ರಾಜ್ಯದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆಂದು ಅವರು ತಿಳಿಸಿದರು.
Related Articles
Thank you for your comment. It is awaiting moderation.
Comments (0)