ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಾಪನೆಗೊಳ್ಳಲಿವೆ ಯೋಗ ಮಂದಿರ..!
- by Suddi Team
- June 21, 2025
- 4 Views

ಬೆಂಗಳೂರು: ಯೋಗದ ಮಹತ್ವ ಕುರಿತು ಜಾಗೃತಿ ಮೂಡಿಸಲು ಮುಂದಾಗಿರುವ ರಾಜ್ಯ ಸರ್ಕಾರ ಆಸ್ಪತ್ರೆಗಳಲ್ಲಿಯೂ ಯೋಗಕ್ಕೆ ಅವಕಾಶ ನೀಡಲು ನಿರ್ಧರಿಸಿದೆ. ಯೋಗದ ಮೂಲಕ ಆರೋಗ್ಯ ವೃದ್ದಿಸಲು ಪೂರಕವಾಗಿ ರಾಜ್ಯದಲ್ಲಿ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ’ಗಳನ್ನು ಸ್ಥಾಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು 11ನೇ ಅಂತರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಭಾಪತಿ ಬಸವರಾಜ್ ಹೊರಟ್ಟಿ ಅವರೊಂದಿಗೆ ಯೋಗಭ್ಯಾಸ ನಡೆಸಿದರು. ವಿಧಾನಸೌಧದ ಮೆಟ್ಟಿಲುಗಳ ಎದುರು 5 ಸಾವಿರಕ್ಕೂ ಹೆಚ್ಚು ಜನರು ಯೋಗಾಭ್ಯಾಸ ನಡೆಸಿ ಗಮನ ಸೆಳೆದರು.
ಈ ವೇಳೆ ಮಾತನಾಡಿದ ಆರೋಗ್ಯ ಸಚಿವರು, ಯೋಗವನ್ನು ಹೆಚ್ಚಿನ ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನ ಹಾಕಿಕೊಳ್ಳುತ್ತಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಪರಿಚಯಿಸುವ ‘ಯೋಗ ಮಂದಿರ’ಗಳನ್ನ ಪ್ರಾರಂಭಿಸುವುದಾಗಿ ಪ್ರಕಟಿಸಿದರು.
ಮೈಸೂರು ಜಿಲ್ಲೆಯನ್ನು ಯೋಗ ಜಿಲ್ಲೆಯನ್ನಾಗಿ ನಿರ್ಮಿಸುವತ್ತ ಈಗಾಗಲೇ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೈಸೂರು ಜಿಲ್ಲೆಯ ಪ್ರತಿ ಮನೆಗಳಲ್ಲಿ ಒಬ್ಬರಾದರೂ ಯೋಗಭ್ಯಾಸ ನಡೆಸುವ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಲು ಗುರಿ ಹೊಂದಲಾಗಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಒಂದು ಜಿಲ್ಲೆಯನ್ನು ಸಂಪೂರ್ಣವಾಗಿ ಯೋಗ ಜಿಲ್ಲೆಯನ್ನಾಗಿ ರೂಪಿಸುವತ್ತ ಹೆಜ್ಜೆ ಇಟ್ಟಿದ್ದೇವೆ. ರಾಜ್ಯದಲ್ಲಿ ಪರಂಪರಾಗತವಾಗಿ ಬಂದ ಅಷ್ಟಾಂಗ ಯೋಗಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
Related Articles
Thank you for your comment. It is awaiting moderation.
Comments (0)