ಸಿಎಂ ಸ್ಥಾನದ ಆಸೆಗೆ ಹೈಕಮಾಂಡ್ ಓಲೈಸಲು ಚಾಮುಂಡಿ ಬೆಟ್ಟ ಬರೀ ಹಿಂದೂಗಳದ್ದಲ್ಲವೆಂದ ಡಿಕೆಶಿ;ವಿಜಯೇಂದ್ರ
- by Suddi Team
- August 28, 2025
- 130 Views

ಬೆಂಗಳೂರು: ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್, ಆ ಕನಸು ನನಸಾಗಲಿ ಎಂಬ ದೃಷ್ಟಿಯಿಂದ ಗಾಂಧಿ ಕುಟುಂಬವನ್ನು ಖುಷಿಪಡಿಸಲು ಚಾಮುಂಡಿ ಬೆಟ್ಟ ಬರೀ ಹಿಂದುಗಳದ್ದಲ್ಲ ಎನ್ನುವ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದ್ದಾರೆ.
ಶಿವಾನಂದವೃತ್ತ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದು, ಆ ಕನಸು ನನಸಾಗಲಿ ಎಂಬ ದೃಷ್ಟಿಯಿಂದ ಗಾಂಧಿ ಕುಟುಂಬವನ್ನು ಖುಷಿಪಡಿಸಲು ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂದು ತಮಗೆ ಅನಿಸುತ್ತಿದೆ. ಯಾರನ್ನೋ ಸಂತಸ ಪಡಿಸಲು ಹಾಗೂ ಗಾಂಧಿ ಕುಟುಂಬವನ್ನು ಖುಷಿಪಡಿಸಲು ಈ ರೀತಿ ಹಿಂದೂಗಳಿಗೆ ಅಪಮಾನ ಮಾಡಿರುವುದನ್ನು ಹಿಂದೂ ಸಮಾಜ ಒಪ್ಪಲು ಸಾಧ್ಯವಿಲ್ಲ.ದಸರಾ ಉತ್ಸವ, ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮೀಯರೂ ಭೇಟಿ ಕೊಡುತ್ತಾರೆಂಬುದು ನಮಗೂ ಗೊತ್ತಿದೆ. ಆದರೆ, ಇದು ಹಿಂದೂಗಳಿಗೆ ಸಂಬಂಧಿಸಿದ್ದಲ್ಲ ಎಂಬ ಹೇಳಿಕೆ ಹಿಂದೂಗಳಿಗೆ ಮಾಡಿದ ಅಪಮಾನ; ಇದು ಅಕ್ಷಮ್ಯ ಅಪರಾಧ ಎಂದರು.
ಇದೇ ಡಿ.ಕೆ.ಶಿವಕುಮಾರ್ ಅವರು ಗಾಂಧಿ ಕುಟುಂಬವನ್ನು ಖುಷಿಪಡಿಸಲು ರಾಮನಗರದಲ್ಲಿ ಏಸುಕ್ರಿಸ್ತನ 115 ಅಡಿಯ ಪ್ರತಿಮೆ ಸ್ಥಾಪಿಸಲು ಮುಂದಾಗಿದ್ದರು.ಒಟ್ಟಿನಲ್ಲಿ ಅವರನ್ನು(ಗಾಂಧಿ ಕುಟುಂಬ) ಖುಷಿಪಡಿಸಿ ಮುಖ್ಯಮಂತ್ರಿ ಗದ್ದುಗೆ ಏರಿ ಕುಳಿತುಕೊಳ್ಳಬೇಕು ಅಷ್ಟೆ ಎಂದರು.
ವನವಾಸದ ಸಂದರ್ಭದಲ್ಲಿ ಶ್ರೀರಾಮನು ರಾಮನಗರಕ್ಕೆ ಬಂದು ಹೋಗಿದ್ದ; ನೆಲೆಸಿದ್ದ ಎಂಬ ಬಲವಾದ ನಂಬಿಕೆ ಹಿಂದೂಗಳಲ್ಲಿದೆ. ಆದರೆ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಏನು ಬೇಕಾದರೂ ಹೇಳುತ್ತೇವೆ; ಏನು ಬೇಕಾದರೂ ಮಾತನಾಡುತ್ತೇವೆ ಎಂಬ ಅವರ ಧೋರಣೆ ಸರಿಯಲ್ಲ. ಭಗವಂತನೂ ಖಂಡಿತವಾಗಿ ನಿಮ್ಮನ್ನು ಕ್ಷಮಿಸುವುದಿಲ್ಲ.ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್ ಪಕ್ಷದ ನಾಯಕರ ನಡವಳಿಕೆಗಳು, ಹಿಂದೂಗಳ ಭಾವನೆಗೆ ಧಕ್ಕೆ ತರುವುದು, ಹಿಂದೂ ಧರ್ಮದ ಕುರಿತ ಅವರ ಹೇಳಿಕೆಗಳನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಚಾಮುಂಡಿ ಬೆಟ್ಟದ ಕುರಿತು ತಮ್ಮ ಹೇಳಿಕೆಯನ್ನು ಡಿ.ಕೆ.ಶಿವಕುಮಾರ್ ಅವರು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
Related Articles
Thank you for your comment. It is awaiting moderation.
Comments (0)