ಬೆಂಗಳೂರು, ಮಲೆನಾಡು, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಅನುದಾನ: ಕೇಂದ್ರಕ್ಕೆ ಬೇಡಿಕೆ ಇಟ್ಟ ಸಿಎಂ

ನವದೆಹಲಿ: ಬೆಂಗಳೂರು, ಮಲೆನಾಡು, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಅನುದಾನವನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಬೆಂಗಳೂರು ಜಾಗತಿಕ ನಗರವಾಗಿದ್ದು, ನಗರದ ಬಂಡವಾಳ ಕಾರ್ಯಗಳಿಗೆ 1.15 ಲಕ್ಷ ಕೋಟಿ ಬೇಕಾಗಿದೆ. ಇದಕ್ಕಾಗಿ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ. ಮಲೆನಾಡು ಮತ್ತು ಪಶ್ಚಿಮ ಘಟ್ಟಗಳ ಪ್ರದೇಶಗಳಲ್ಲಿ ಪ್ರವಾಹದಿಂದಾಗುವ ಅನಾಹುತಗಳನ್ನು ನಿಭಾಯಿಸಲು ವಿಶೇಷ ಅನುದಾನ, ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ ಎಂದರು.

ಹಣಕಾಸಿನ ಕಾರ್ಯಕ್ಷಮತೆ ತೋರದ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನ-ಕೇಂದ್ರದ ಕ್ರಮ ಸರಿಯಿಲ್ಲ:

ತಲಾವಾರು ಆದಾಯ ಪರಿಗಣಿಸುವ ಮಾನದಂಡವನ್ನು ಶೇ. 45ರಿಂದ ಶೇ. 20ಕ್ಕೆ ಇಳಿಸಬೇಕೆಂದು ಕೋರಲಾಗಿದೆ. ಕೇರಳ, ಆಂಧ್ರ, ತಮಿಳುನಾಡು ರಾಜ್ಯಗಳಿಗೆ ನೀಡಿದಂತೆ ಆದಾಯ ಕೊರತೆ ಅನುದಾನವನ್ನು ಕರ್ನಾಟಕಕ್ಕೂ ನೀಡಬೇಕು. ಇಲ್ಲವೇ ಯಾವುದೇ ರಾಜ್ಯಗಳಿಗೆ ನೀಡಬಾರದು. ರಾಜಸ್ವ ಹೆಚ್ಚಳದಲ್ಲಿ ಖರ್ಚಿಗಿಂತ ಆದಾಯ ಹೆಚ್ಚಿದ್ದು, ವಿತ್ತೀಯ ಕೊರತೆಯಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ರಾಜಸ್ವ ಹೆಚ್ಚಳದಲ್ಲಿದ್ದ ಕರ್ನಾಟಕ ಕಳೆದ ವರ್ಷದಿಂದ ವಿತ್ತೀಯ ಕೊರತೆ ಎದುರಿಸುತ್ತಿದ್ದು, ಮುಂದಿನ ವರ್ಷಕ್ಕೆ ಈ ಪರಿಸ್ಥಿತಿ ಸುಧಾರಿಸಲಿದೆ. ನಿರಂತರವಾಗಿ ವಿತ್ತೀಯ ಕೊರತೆಯಲ್ಲಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ಹು ನೀಡಲಾಗುತ್ತದೆ. ಹಣಕಾಸಿನ ಕಾರ್ಯಕ್ಷಮತೆ ತೋರದಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನ ನೀಡುತ್ತಿರುವ ಕೇಂದ್ರದ ಕ್ರಮ ಸರಿಯಾದುದಲ್ಲ ಎಂದರು.

ರಾಜ್ಯಕ್ಕೆ ಅಗತ್ಯವಿರುವ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಗಿದೆಯೇ ಹೊರತು ಆರೋಪ ಮಾಡಿಲ್ಲ. ರಾಜ್ಯಕ್ಕೆ ಅನ್ಯಾಯವಾಗಿದ್ದರೆ, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ಕೇಂದ್ರ ವಿತ್ತ ಸಚಿವರು ನೀಡಿರುವುದಾಗಿ ಸಿಎಂ ತಿಳಿಸಿದರು.

ಏಳು ಮಸೂದೆಗಳ ಅನುಮೋದನೆಗೆ ಮನವಿ:

ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್‌ಗಳ ಬಗ್ಗೆ ಚರ್ಚಿಸಲು ಇಂದು ರಾಷ್ಟ್ರಪತಿಗಳನ್ನು ಭೇಟಿ ಮಾಡಿದ್ದೆ. ಮಸೂದೆಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Related Articles

Comments (0)

Leave a Comment