ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ; ಮೋದಿಗೆ ಪತ್ರ ಬರೆದ ಸಿಎಂ
- by Suddi Team
- July 14, 2025
- 69 Views

ಬೆಂಗಳೂರು: ಕೇಂದ್ರ ಸರ್ಕಾರ ಶಿಷ್ಟಾಚಾರ ಪಾಲನೆ ಮಾಡದೇ ಇರುವುದನ್ನು ಪ್ರತಿಭಟಿಸುವ ಸಲುವಾಗಿಯೇ ನಾನೂ ಸೇರಿದಂತೆ ನಮ್ಮ ಪಕ್ಷದ ಯಾವ ಸಚಿವರು, ಶಾಸಕರೂ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದಾರೆ.
ಸಿಗಂದೂರು ಕಾರ್ಯಕ್ರಮಕ್ಕೆ ಹಾಜರಾಗದ ಕುರಿತು ಸ್ಪಷ್ಟೀಕರಣ ನೀಡಿದ ಸಿಎಂ, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ. ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಲಿಲ್ಲ ಎಂದರು.
ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮವನ್ನು ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸಲಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಟಾಚಾರ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಟಾಚಾರ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಣ ನೀಡಲಾಗಿಲ್ಲ ಎಂದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕೇಂದ್ರ ಸರ್ಕಾರದ ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಆಯೋಜಿಸಿದ್ದ ಸಮಾರಂಭದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಅಂಬಾರಗೋಡ್ಲು – ಕಳಸವಳ್ಳಿ ಸೇತುವೆ ಉದ್ಘಾಟನೆಯೂ ಸೇರಿದಂತೆ ಹಲವು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.
ರಾಜ್ಯ ಸರ್ಕಾರವನ್ನು ಸಂಪರ್ಕಿಸದೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಮಾತ್ರವಲ್ಲ, ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ವಿಷಯವನ್ನು ತಿಳಿಸದೆ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರನ್ನು ಕೂಡ ಮುದ್ರಿಸಲಾಗಿತ್ತು. ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕುವುದರಿಂದ ಹಿಡಿದು ಆಹ್ವಾನ ನೀಡುವವರೆಗೆ ಎಲ್ಲ ಹಂತಗಳಲ್ಲಿಯೂ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ ಎಂದು ಪತ್ರದಲ್ಲಿ ದೂರಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಂಘರ್ಷಕ್ಕೆ ಕಾರಣವಾಗಬಹುದಾದ ಈ ನಡೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಇದನ್ನು ರಾಜ್ಯ ಸರ್ಕಾರ ಬಲವಾಗಿ ಖಂಡಿಸುತ್ತದೆ. ಮುಂದಿನ ದಿನಗಳಲ್ಲಿ ಇಂತಹ ಲೋಪಗಳಾಗದಂತೆ ತಮ್ಮ ಎಲ್ಲ ಸಂಪುಟ ಸಹೋದ್ಯೋಗಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಪತ್ರದ ಮೂಲಕ ದೂರಿನ ರೂಪದ ಮನವಿ ಮಾಡಿದ್ದಾರೆ.
Related Articles
Thank you for your comment. It is awaiting moderation.
Comments (0)