ಸಿಎಂ ಬದಲಾವಣೆ ಹೇಳಿಕೆ; ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾಗೆ ಶೋಕಾಸ್ ನೋಟಿಸ್ ಜಾರಿ

ಬೆಂಗಳೂರು: ರಾಜ್ಯದಲ್ಲಿ ಪದೇ ಪದೇ ಕೇಳಿಬರುತ್ತಿರುವ ಮುಖ್ಯಮಂತ್ರಿ ಬದಲಾವಣೆ ಹೇಳಿಕೆ ತಡೆಗೆ ಎಚ್ಚರಿಕೆ ನೀಡುತ್ತಿದ್ದ ಕಾಂಗ್ರೆಸ್ ಇದೀಗ ಮೊದಲ ಬಾರಿ ಶಾಸಕ ಬಸವರಾಜು ಶಿವಗಂಗಾಗೆ ನೋಟಿಸ್ ನೀಡಿ ಏಳು ದಿನದಲ್ಲಿ ಉತ್ತರಿಸುವಂತೆ ಸೂಚಿಸುವ ಮೂಲಕ ಸಿಎಂ ಬದಲಾವಣೆ ಹೇಳಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಯಾರೂ ಹೇಳಿಕೆ ನೀಡಬಾರದು ಎಂದು ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದ್ದರೂ ಡಿಕೆ ಶಿವಕುಮಾರ್ ಬೆಂಬಲಿಗ ಶಾಸಕ ಬಸವರಾಜು ವಿ. ಶಿವಗಂಗಾ ಡಿಸೆಂಬರ್ ಒಳಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎನ್ನುವ ಮೂಲಕ ಹೈಕಮಾಂಡ್ ಸೂಚನೆಯನ್ನು ಧಿಕ್ಕರಿಸಿದ್ದಾರೆ. ಇದರಿಂದ ಪಕ್ಷಕ್ಕೆ ಮತ್ತೆ ಮುಜುಗರವಾಗಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿದ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ‌ ಡಿಕೆ ಶಿವಕುಮಾರ್ ನೋಟಿಸ್ ನೀಡುವುದಾಗಿ ತಿಳಿಸಿದ್ದರು.

ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಸ್ತು ಪಾಲನಾ ಸಮಿತಿ ಸಂಚಾಲಕರಾದ ನಿವೇದಿತ್ ಆಳ್ವ ಅವರು ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

ನೋಟಿಸ್ ನಲ್ಲೇನಿದೆ?;

ಮುಖ್ಯಮಂತ್ರಿಗಳ ಬದಲಾವಣೆ ವಿಷಯದಲ್ಲಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟು ಮಾಡುವ ರೀತಿಯ ಹೇಳಿಕೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿರುತ್ತದೆ.ತಮ್ಮ ಈ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಲ್ಲದೆ, ಪಕ್ಷದ ಶಿಸ್ತು ಉಲ್ಲಂಘನೆ ಆಗಿರುತ್ತದೆ. ತಮ್ಮ ಈ ಅಶಿಸ್ತಿನ ಹೇಳಿಕೆಗಳನ್ನು ಕೆಪಿಸಿಸಿ ಶಿಸ್ತು ಸಮಿತಿಯ ಗಂಭೀರವಾಗಿ ಪರಿಗಣಿಸಿ ಈ ಕಾರಣ ಕೇಳಿ ನೋಟಿಸನ್ನು ನೀಡಲಾಗಿದೆ. ತಾವು ಈ ನೋಟೀಸು ತಲುಪಿದ 7 ದಿನಗಳಲ್ಲಿ ತಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿಯನ್ನು ನೀಡಲು ಈ ಮೂಲಕ ಸೂಚಿಸಲಾಗಿದೆ ಎಂದು ತಿಳಿಸಲಾಗಿದೆ.

Related Articles

Comments (0)

Leave a Comment