ವಸತಿ ಇಲಾಖೆಯಲ್ಲಿ ಲಂಚದ ಆಡಿಯೋ ವೈರಲ್; ಜಮೀರ್ ತಲೆದಂಡಕ್ಕೆ ಬಿಜೆಪಿ ಪಟ್ಟು, ಕೈ ಸೈಲೆಂಟು
- by Suddi Team
- June 20, 2025
- 236 Views

ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನಲಾದ ಆಡಿಯೋ ಒಂದು ರಾಜ್ಯದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಸದ್ದು ಮಾಡುತ್ತಿದೆ. ಇದರಿಂದ, ವಸತಿ ಸಚಿವ ಜಮೀರ್ ಅಹಮದ್ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದ್ದರೆ, ಕಾಂಗ್ರೆಸ್ ಜಮೀರ್ ಕಡೆ ಬೆರಳು ತೋರಿ ಕೈತೊಳೆದುಕೊಂಡಿದೆ.
ಆಡಿಯೋ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಪ್ರತಿಪಕ್ಷ ನಾಯಕ ಆರ್. ಅಶೋಕ್, ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಿರುವ ಶಾಸಕ ಬಿ.ಆರ್.ಪಾಟೀಲ್ ಅವರು ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಸ್ಪಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿದೆ? ಈ ಕೂಡಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಪಡೆದು ಶಾಸಕ ಬಿ.ಆರ್.ಪಾಟೀಲ್ ಅವರ ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.
ಜೆಡಿಎಸ್ ನಾಯಕ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಮಾತನಾಡಿ, ಬಿ.ಆರ್.ಪಾಟೀಲ್ ಹೇಳಿರುವುದು ನಿಜ. ವಸತಿ ಇಲಾಖೆಯಲ್ಲಿ ಹಣ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆ ಆಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನು ನಾನಾಗಲಿ, ವಿರೋಧ ಪಕ್ಷವಾಗಲಿ ಹೇಳುತ್ತಿಲ್ಲ. ಸಾಕ್ಷಾತ್ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಮುಖ್ಯಮಂತ್ರಿಗಳ ಸಲಹೆಗಾರರೇ ಹೇಳಿದ್ದಾರೆ. ಈಗ ಚೆನ್ನಾಗಿ ಹಣ ಲೂಟಿ ಹೊಡೆದರೆ ಮುಂದೆ ಚುನಾವಣೆ ನಡೆಸಬಹುದು ಎಂಬುದು ಇವರ ಉದ್ದೇಶ ಎಂದು ಕಿಡಿಕಾರಿದ್ದಾರೆ.
ಆದರೆ, ಈ ಕುರಿತು ಪ್ರತಿಕ್ರಿಯೆಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ನಿರಾಕರಿಸಿದ್ದಾರೆ. ಆಡಿಯೋ ವಿಚಾರ ಕುರಿತು ಬಿ.ಆರ್. ಪಾಟೀಲ್ ಅವರನ್ನೇ ಕೇಳಿದರೆ ಒಳ್ಳೆಯದು ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಆರೋಪದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ವಿವಾದದಿಂದ ಅಂತರ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ.
Related Articles
Thank you for your comment. It is awaiting moderation.
Comments (0)