ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಿ: ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ತಾಕೀತು

ಹೊಸದುರ್ಗ: ಪ್ರಜಾಸೇವಾ ಆಂದೋಲನದಡಿ ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿಗಳನ್ನು ಕೇವಲ ವಿಲೇವಾರಿ ಮಾಡುವುದಷ್ಟೇ ಮುಖ್ಯವಲ್ಲ, ಜನರ ಸಮಸ್ಯೆಗಳಿಗೆ ನೈಜ ಪರಿಹಾರ ಕಲ್ಪಿಸಬೇಕು. ಕಾನೂನು ತೊಡಕುಗಳಿರುವ ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಅರ್ಜಿಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೊಸದುರ್ಗ ಪಟ್ಟಣದ ಅಶೋಕ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಶಾಸಕರು ಮತ್ತು ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಪ್ರಜಾಸೇವಾ ಆಂದೋಲನಗಳಲ್ಲಿ ಇದುವರೆಗೆ ಸುಮಾರು 770 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಅವುಗಳಲ್ಲಿ 759 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಹಿರಿಯೂರು ತಾಲ್ಲೂಕಿನಲ್ಲಿ ಸ್ವೀಕರಿಸಿದ 287 ಅರ್ಜಿಗಳ ಪೈಕಿ 282 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ ಬಂದ 66 ಅರ್ಜಿಗಳ ಪೈಕಿ 64 ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ. ಬಾಕಿ ಅರ್ಜಿಗಳ ವಿಲೇವಾರಿ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕೆಡಿಪಿ ಸಭೆಗಳಲ್ಲಿ ಪರಿಶೀಲನೆ ನಡೆಸಲಾಗುವುದು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಪ್ರಜಾಸೇವಾ ಆಂದೋಲನಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ. ಈ ಹಿಂದೆ ಜನಸ್ಪಂದನ ಸಭೆಗಳು ಸಾಂಪ್ರದಾಯಿಕವಾಗಿ ನಡೆಯುತ್ತಿದ್ದವು. ಆದರೆ ಈಗ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಯುತ್ತಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸದಂತೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.

ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಸೇರಿದಂತೆ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಿ, ಪ್ರತಿ ಸಂಘಕ್ಕೆ 10 ಲಕ್ಷ ರೂ. ನೀಡುವ ವ್ಯವಸ್ಥೆ ಮಾಡಲಾಗಿದೆ. ರೈತರ ಹಿತದೃಷ್ಟಿಯಿಂದ ನೇಗಿಲಯೋಗಿ, ತೇಗದ ಸಿರಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ರೈತರಿಗೆ ಬೆಳೆ ವಿಮೆ, ನೀರಾವರಿಗೆ ಆದ್ಯತೆ

ಜಿಲ್ಲೆಯಲ್ಲಿ ಮೂರು ಲಕ್ಷಕ್ಕೂ ಅಧಿಕ ರೈತರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ. ಬಿತ್ತನೆ ಮಾಡದ ರೈತರಿಗೂ ವಿಮೆ ಸೌಲಭ್ಯ ದೊರೆಯಲಿದ್ದು, ಇದಕ್ಕಾಗಿ ಸುಮಾರು 207 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಸಚಿವರು ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯಡಿ ಭದ್ರಾ ಜಲಾಶಯದಿಂದ ನೀರು ಹರಿಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿವರ್ಷ 29.9 ಟಿಎಂಸಿ ನೀರು ಪಡೆಯುವ ವ್ಯವಸ್ಥೆ ಕಲ್ಪಿಸುವ ಉದ್ದೇಶವಿದೆ. ಹೊಸದುರ್ಗ ತಾಲ್ಲೂಕಿನ ಜನರಿಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ನೀರಾವರಿ ಯೋಜನೆಗೆ ಯಾವುದೇ ರೀತಿಯ ಹಾನಿಯಾಗದಂತೆ ಜನರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಜಿ. ಗೋವಿಂದಪ್ಪ ಮಾತನಾಡಿ, ಸಚಿವರ ಮಾರ್ಗದರ್ಶನದಲ್ಲಿ ಪ್ರಜಾಸೇವಾ ಆಂದೋಲನ ಯಶಸ್ವಿಯಾಗಿ ನಡೆಯುತ್ತಿದೆ. ಖಾತೆ ಬದಲಾವಣೆ, ನಿವೇಶನ, ಹಕ್ಕುಪತ್ರ, ಪಿಂಚಣಿ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು. ಎಲ್ಲ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಉಪಸ್ಥಿತರಿದ್ದು, ಅರ್ಜಿಗಳನ್ನು ಸ್ವೀಕರಿಸಿ ಪರಿಹಾರ ಕಲ್ಪಿಸಲಿದ್ದಾರೆ ಎಂದರು.

ಹಕ್ಕುಪತ್ರ, ಪ್ರೋತ್ಸಾಹಧನ ವಿತರಣೆ

ಕಾರ್ಯಕ್ರಮದಲ್ಲಿ ಕೃಷಿ, ತೋಟಗಾರಿಕೆ, ಆರೋಗ್ಯ, ಅರಣ್ಯ, ಪಶುಸಂಗೋಪನೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಪಟ್ಟಣ ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಗಳ ವಸ್ತುಪ್ರದರ್ಶನ ಮಳಿಗೆಗಳನ್ನು ಸಚಿವರು ಉದ್ಘಾಟಿಸಿದರು.

ಹೊಸದುರ್ಗ ಸೇರಿದಂತೆ ವಿವಿಧ ಪಟ್ಟಣ ಪ್ರದೇಶಗಳಲ್ಲಿ ಮನೆ ನಿರ್ಮಿಸಿಕೊಂಡಿರುವ ಫಲಾನುಭವಿಗಳಿಗೆ ಜಾಗದ ಹಕ್ಕುಪತ್ರಗಳನ್ನು ವಿತರಿಸಲಾಯಿತು. ಅಂತರ್ಜಾತಿ ವಿವಾಹವಾದ ಜೋಡಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಮಂಜೂರಾದ ಪ್ರೋತ್ಸಾಹಧನದ ಎಫ್‌ಡಿ ಬಾಂಡ್‌ಗಳನ್ನು ವಿತರಿಸಲಾಯಿತು.

ಜಿಲ್ಲಾಧಿಕಾರಿ ಎಸ್. ರಮ್ಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಸ್. ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪ್ಯಾನಾಯ್ಕ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಾಬು, ತಹಶೀಲ್ದಾರ್ ತಿರುಪತಿ ಪಾಟೀಲ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುನೀಲ್ ಕುಮಾರ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Related Articles

Comments (0)