ಬೆಂಗಳೂರಿನ ರಸ್ತೆಗುಂಡಿ ಮುಚ್ಚಲು ಅಧಿಕಾರಿಗಳಿಗೆ ಅ. 31 ರವರೆಗೆ ಸಿಎಂ ಗಡುವು: ಡಿಸಿಎಂ ಡಿ.ಕೆ. ಶಿವಕುಮಾರ್
- by Suddi Team
- September 20, 2025
- 4 Views

ಬೆಂಗಳೂರು:”ಅಕ್ಟೊಬರ್ 31ರ ಒಳಗಾಗಿ ಬೆಂಗಳೂರಿನ ಎಲ್ಲಾ ರಸ್ತೆಗಳನ್ನು ಸರಿಪಡಿಸಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ಜೊತೆಗೆ ರಸ್ತೆಗುಂಡಿ ಮುಚ್ಚಲು ಹೆಚ್ಚುವರಿ 750 ಕೋಟಿ ರೂ. ಅನುದಾನ ಕೊಡುವ ಭರವಸೆ ನೀಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಂಗಳೂರು ರಸ್ತೆಗಳ ಸುಧಾರಣೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕುರಿತು ಸಿಎಂ ನಿವಾಸ ಕಾವೇರಿಯಲ್ಲಿ ಶನಿವಾರ ನಡೆದ ಉನ್ನತ ಮಟ್ಟದ ಸಭೆ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.”ಬೆಂಗಳೂರಿನ ರಸ್ತೆಗುಂಡಿ ಸಮಸ್ಯೆ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ತಾವು ಜಿಬಿಎ ಅಧಿಕಾರಿಗಳ ಸಭೆ ಮಾಡಿದ್ದೇವೆ. ನಮ್ಮ ಅಧಿಕಾರಿಗಳು, ಪೊಲೀಸರು ಹಾಗೂ ಸಾರ್ವಜನಿಕರ ಸಹಕಾರದಿಂದ ನಾವು ನಗರದಲ್ಲಿ 10 ಸಾವಿರ ರಸ್ತೆ ಗುಂಡಿ ಪತ್ತೆ ಮಾಡಿದ್ದೇವೆ. ಇವುಗಳನ್ನು ಸರಿಪಡಿಸದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ” ಎಂದು ಹೇಳಿದರು.
“ರಸ್ತೆಗುಂಡಿಗಳ ಪಟ್ಟಿ ಮಾಡಿ ಮಾಹಿತಿ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದು, ಸಾರ್ವಜನಿಕರು ಅಧಿಕಾರಿಗಳ ಗಮನಕ್ಕೆ ತಂದರೆ ಆದಷ್ಟು ಬೇಗ ಅದನ್ನು ಮುಚ್ಚಲಾಗುವುದು. ಈಗಿನ ಮಳೆಗಾಲ ಮುಕ್ತಾಯದ ನಂತರ ಪ್ರತ್ಯೇಕ ಯೋಜನೆ ರೂಪಿಸಲು ಸಿಎಂ ನಿರ್ದೇಶನ ನೀಡಿದ್ದಾರೆ” ಎಂದರು.
“ಮಳೆ ಹೆಚ್ಚಾಗಿರುವುದರಿಂದ ರಸ್ತೆಗುಂಡಿ ಸಮಸ್ಯೆ ಹೆಚ್ಚಾಗಿದೆ. ದೇಶದ ಎಲ್ಲಾ ನಗರಗಳಲ್ಲಿ ರಸ್ತೆಗುಂಡಿ ಇವೆ. ಆದರೆ ಬೆಂಗಳೂರು ಮಾತ್ರ ಸುದ್ದಿಯಾಗುತ್ತಿದೆ. ಬೇರೆ ಕಡೆಗಳಲ್ಲಿ ಮಾಧ್ಯಮಗಳನ್ನು ನಿಯಂತ್ರಿಸಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಮಾಧ್ಯಮಗಳಿಗೆ ಹೆಚ್ಚು ಸ್ವಾತಂತ್ರ್ಯ ನೀಡಿದ್ದು, ಈ ಸಮಸ್ಯೆ ಬಗ್ಗೆ ಹೆಚ್ಚು ಪ್ರಚಾರವಾಗುತ್ತಿದೆ” ಎಂದು ತಿಳಿಸಿದರು.
Related Articles
Thank you for your comment. It is awaiting moderation.
Comments (0)