ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ; ಬಿಬಿಎಂಪಿ ಈಗ ಜಿಬಿಎ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸೋಮವಾರದಿಂದ ಅಸ್ತಿತ್ವಕ್ಕೆ ಬಂದಿದ್ದು,ಬಿಬಿಎಂಪಿ ಇದೀಗ ಜಿಬಿಎ ಆಗಿದೆ. ಅದರಂತೆ ಐದು ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿದ್ದು, ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ.

ಜಿಬಿಎ ಅಸ್ತಿತ್ವಕ್ಕೆ ಬಂದ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪಾಲಿಕೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,“ಆಡಳಿತಾತ್ಮಕ ಅನುಭವವಿರುವ, ಉಪ ಆಯುಕ್ತರುಗಳಾಗಿ ಕೆಲಸ ನಿರ್ವಹಿಸಿರುವ ಹಿರಿಯ ಅಧಿಕಾರಿಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಆಯುಕ್ತರನ್ನಾಗಿ ನೇಮಕ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದರು.

“ಯಾವ, ಯಾವ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚಿಸಲಾಗಿದ್ದು, ಸಧ್ಯದ ಮಟ್ಟಿಗೆ ಈಗ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ” ಎಂದು ಹೇಳಿದರು.

ಸರ್ಕಾರಿ ಅಧಿಕೃತ ಕೆಲಸಗಳಿಗೆ ಹೆಲಿಕಾಪ್ಟರ್ ಮತ್ತು ವಿಮಾನಗಳ ಬಳಕೆ ಸ್ವರೂಪ ಕುರಿತ ಸಭೆಯ ಬಗ್ಗೆ ಕೇಳಿದಾಗ, “ಈ ವಿಚಾರ ಅನೇಕ ವರ್ಷದಿಂದಲೂ ಸರ್ಕಾರದ ಮುಂದೆ ಬಾಕಿ ಉಳಿದಿತ್ತು. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಹಾಗೂ ಟೆಂಡರ್ ಕರೆಯುವ ವಿಚಾರವಾಗಿ ಮುಖ್ಯಮಂತ್ರಿಯವರು ನನಗೆ ಜವಾಬ್ದಾರಿ ನೀಡದ್ದರು. ಬೇರೆ ರಾಜ್ಯಗಳಲ್ಲಿನ ವ್ಯವಸ್ಥೆಯನ್ನು ತಿಳಿದುಕೊಳ್ಳುವಂತೆ ಹಾಗೂ ಎಚ್ಎಎಲ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ” ಎಂದರು.

Related Articles

Comments (0)

Leave a Comment