‘ನಾನು ಸೋತಿರಬಹುದು, ಆದರೆ ರೈತರ ಪಾಲಿಗೆ ಸತ್ತಿಲ್ಲ; ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು’: ಡಾ. ಕೆ. ಸುಧಾಕರ್

ಚಿಕ್ಕಬಳ್ಳಾಪುರ: ಭಾಗ್ಯನಗರ (ಬಾಗೇಪಲ್ಲಿ) ವಿಧಾನಸಭಾ ಕ್ಷೇತ್ರದ ಗಂಟ್ಲಮಲ್ಲಮ್ಮ ಕಣಿವೆ ಜಲಾಶಯ ನಿರ್ಮಾಣದ ಹೆಸರಿನಲ್ಲಿ ಬಡ ರೈತರಿಗೆ ವಂಚಿಸಿ, ಅವರ ಜಮೀನುಗಳನ್ನು ಕಡಿಮೆ ಬೆಲೆಗೆ ಖರೀದಿಸಲಾಗಿದೆ. ಭೂಸ್ವಾಧೀನ ಪರಿಹಾರದ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಆಗ್ರಹಿಸಿದ್ದಾರೆ.

ಈ ಸಂಬಂಧ ಬಾಗೇಪಲ್ಲಿಯಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೈತರಿಗೆ ಆಗಿರುವ ಅನ್ಯಾಯದ ವಿರುದ್ಧ ರೈತರು, ಸಾರ್ವಜನಿಕರು ಹಾಗೂ ಎನ್‌ಡಿಎ ಮೈತ್ರಿಕೂಟದ ಕಾರ್ಯಕರ್ತರು ಒಗ್ಗಟ್ಟಿನಿಂದ ಧ್ವನಿ ಎತ್ತಿದ್ದಾರೆ ಎಂದರು.

ಪ್ರತಿಭಟನೆಯ ಬಳಿಕ ಬಾಗೇಪಲ್ಲಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ, ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹಾಗೂ ಇತರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

ಅಭಿವೃದ್ಧಿಯ ಹೆಸರಿನಲ್ಲಿ ರೈತರ ಬದುಕಿನೊಂದಿಗೆ ಚೆಲ್ಲಾಟವಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ಅಕ್ರಮಗಳ ಕುರಿತು ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಸುಧಾಕರ್ ಆಗ್ರಹಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ ರೈತರ ಪಾಲಿಗೆ ನಾನು ಸತ್ತಿಲ್ಲ. ರೈತರಿಗೆ ನ್ಯಾಯ ಸಿಗುವವರೆಗೂ ನನ್ನ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಅವರು ಹೇಳಿದರು.

ಪ್ರತಿಭಟನೆಯಲ್ಲಿ ಪಕ್ಷದ ಮುಖಂಡ ಹರಿನಾಥ್ ರೆಡ್ಡಿ, ಮಾಜಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಎನ್‌ಡಿಎ ನಾಯಕರು, ಸಾವಿರಾರು ರೈತರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related Articles

Comments (0)