ಚನ್ನರಾಯಪಟ್ಟಣ ಸುತ್ತಮುತ್ತ ಗ್ರಾಮಗಳಲ್ಲಿನ ಭೂಸ್ವಾಧೀನ ಕೈಬಿಟ್ಟ ಸರ್ಕಾರ: ರೈತರ ಹೋರಾಟಕ್ಕೆ ದೊಡ್ಡ ಗೆಲುವು
- by Suddi Team
 - July 15, 2025
 - 321 Views
 
                                                          ಬೆಂಗಳೂರು: ಏರೋಸ್ಪೇಸ್ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ಕೆಐಎಡಿಬಿ ಮೂಲಕ ನಡೆಸಿದ್ದ ಭೂ ಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡುವ ನಿರ್ಧಾರವನ್ನು ಪ್ರಕಟಿಸಿದೆ. ಇದು ರೈತ ಹೋರಾಟಕ್ಕೆ ಸಿಕ್ಕ ದೊಡ್ಡ ಗೆಲುವಾಗಿದೆ.
ಭೂಸ್ವಾಧೀನ ವಿರೋಧಿಸಿ ಹೋರಾಟ ನಡೆಸುತ್ತಿದ್ದವರೊಂದಿಗಿನ ಮಾತುಕತೆ ವೇಳೆ ನಿರ್ಧಾರಕ್ಕೆ 10 ದಿನ ಕಾಲಾವಕಾಶ ಪಡೆದುಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಗಡುವಿನಂತೆ ಇಂದು ವಿಧಾನಸೌಧದ ಸಭಾಂಗಣದಲ್ಲಿ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆ ನಡೆಸಿದರು.
ಹೋರಾಟಗಾರರ ಅಭಿಪ್ರಾಯ ಆಲಿಸಿ, ಅಧಿಕಾರಿಗಳ ಜತೆ ಸಮಾಲೋಚಿಸಿದ ಸಿಎಂ ಅಂತಿಮವಾಗಿ ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸುವ ನಿರ್ಧಾರಕ್ಕೆ ಬಂದರು. ಈಗಾಗಲೇ ಅಧಿಸೂಚನೆಯೂ ಹೊರಡಿಸಲಾಗಿರುವ ಹಿನ್ನಲೆಯಲ್ಲಿ ಎದುರಾಗಬಹುದಾದ ಕಾನೂನು ತೊಡಕುಗಳ ಪರಿಹಾರಕ್ಕೂ ಸಿಎಂ ಸೂಚಿಸಿದರು.
ಸಭೆ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದ್ದೇವೆ ಎಂದು ಪ್ರಕಟಿಸಿದರು.
ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನ ಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ. 1,777 ಎಕರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸ್ವಾಧೀನಪಡಿಸಿ, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶವಾಗಿತ್ತು ಎಂದರು.
ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ, ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸರ್ಕಾರ ರೈತರು, ಜಮೀನುದಾರರು ಸೇರಿ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆಗಳಿಗೂ ಉತ್ತೇಜನ ನೀಡುವುದು ಅಗತ್ಯವಿದೆ. ಯಾವುದೇ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಅವರ ಮನವಿಯಂತೆಯೇ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧರಿಸಿದೆ ಎಂದು ಘೋಷಿಸಿದರು.
ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು. ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆ ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆ ಮುಂದುವರೆಸಿಕೊಂಡು ಹೋಗಬಹುದಾಗಿದೆ ಎಂದರು.
ಇನ್ನು ಹೋರಾಟಕ್ಕೆ ಸಾಥ್ ನೀಡಿದ್ದ ನಟ ಪ್ರಕಾಶ್ ರಾಜ್ ಸಿಎಂ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಮುಖ್ಯಮಂತ್ರಿ ಅವರ ಸಾಮಾಜಿಕ ನ್ಯಾಯ ಕೇವಲ ನುಡಿಯಲ್ಲಿ ಮಾತ್ರವಲ್ಲ ನಡೆಯಲ್ಲೂ ಇದೆ. ಅದನ್ನು ಇಂದು ಅವರು ತೋರಿಸಿಕೊಟ್ಟಿದ್ದಾರೆ ಎಂದು ಬಣ್ಣಿಸಿದರು.
Related Articles
                            Thank you for your comment. It is awaiting moderation.
                        
                                        
                    
                    
                
                            
                                            
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
Comments (0)