ಕರಾವಳಿ,ಮಲೆನಾಡಿನಲ್ಲಿ ಮಳೆಯಾರ್ಭಟ; ಮೂರು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮೂರು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಶನಿವಾರ‌ ರಜೆ ಘೋಷಣೆ ಮಾಡಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯಿಭಾರ ಕುಸಿತದ ಪರಿಣಾಮ‌ ರಾಜ್ಯದ ಮೇಲಾಗಿದ್ದು,ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಮಲೆನಾಡು ಭಾಗದಲ್ಲಿ ಮಳೆಯ ಪ್ರಮಾಣ ತೀವ್ರವಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌.ಆರ್.ಪುರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಆಗಸ್ಟ್ 30 ರಂದು ರಜೆ ಘೋಷಿಸಲಾಗಿದೆ.

‌ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ಕಸಬಾ, ಅಂಬಳೆ, ವಸ್ತಾರೆ, ಆವತಿ ಹೋಬಳಿ ಹಾಗೂ ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ಲಿಂಗದಹಳ್ಳಿ ಹೋಬಳಿಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಕರಾವಳಿ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆ ಜೋರಾಗಿರುವುದರಿಂದ 30 ರಂದು ಜಿಲ್ಲೆಯ ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ. ಭಾರಿ ಮಳೆ ಸಾಧ್ಯತೆ ಹಿನ್ನಲೆ ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದ್ದಾರೆ.

ಕರಾವಳಿ ಭಾಗದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಉಳಿದ ಕಡೆ ಯಾವುದೇ ರಜೆ ಆದೇಶ ಹೊರಡಿಸಿಲ್ಲ.

ಶಿವಮೊಗ್ಗ,ಉಡುಪಿ‌ ಸೇರಿದಂತೆ ಇನ್ನು ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು ಪರಿಸ್ಥಿತಿ ನೋಡಿ ಕ್ರಮಕ್ಕೆ ಆಯಾ ತಾಲ್ಲೂಕು ಆಡಳಿತಗಳಿಗೆ ಸೂಚಿಸಲಾಗಿದೆ.

Related Articles

Comments (0)

Leave a Comment