ರಾಜ್ಯದಲ್ಲಿ ಭಾರಿ ಮಳೆ; ಹಲವು ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಹಾಸನ,ಉತ್ತರ ಕನ್ನಡ,ಶಿವಮೊಗ್ಗ,ಚಿಕ್ಕಮಗಳೂರು ಭಾಗದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದಾಗಿ ಸಕಲೇಶಪುರ, ಬೇಲೂರು ತಾಲೂಕಿನ ಅಂಗನವಾಡಿ,ಶಾಲಾ-ಕಾಲೇಜುಗಳಿಗೆ ಇಂದು ರಜೆ ನೀಡಿ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಕಾರಣದಿಂದಾಗಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ.

ಮಲೆನಾಡಿನ ಶಿವಮೊಗ್ಗ ಹಾಗು ಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು,ಶಿವಮೊಗ್ಗ ಜಿಲ್ಲೆಯ ಎಲ್ಲಾ ಏಳು ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ಆಯಾ ತಾಲ್ಲೂಕಿನ‌ ತಾಲ್ಲೂಕು ಅಧಿಕಾರಿಗಳು ಇಂದು ರಜೆ ನೀಡಿ ಆದೇಶಿಸಿದ್ದಾರೆ. ಚಿಕ್ಕಮಗಳೂರಿನ ಕಳಸ, ಶೃಂಗೇರಿ, ಎನ್‌ಆರ್‌ ಪುರ ಹಾಗೂ ಕೊಪ್ಪ ತಾಲ್ಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ಘೋಷಿಸಿದ್ದಾರೆ.

ಹವಾಮಾನ ಇಲಾಖೆ ರಾಜ್ಯದ ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಆಲರ್ಟ್ ಘೋಷಣೆ ಮಾಡಿದೆ. ಉಳಿದಂತೆ ರಾಜ್ಯಾದ್ಯಂತ ಉಳಿದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

Related Articles

Comments (0)

Leave a Comment