‘ನಮ್ಮ ಶಾಲೆ ನಮ್ಮ ಜವಾಬ್ದಾರಿ’; 1,000 ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಗುರಿ: ಡಿ.ಕೆ.ಶಿವಕುಮಾರ್
- by Suddi Loka
- November 5, 2026
- 3 Views
ಬೆಂಗಳೂರು: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಗುಣಮಟ್ಟ ಮತ್ತು ಮೂಲಸೌಕರ್ಯ ಸುಧಾರಿಸುವ ಉದ್ದೇಶದಿಂದ ಮೊದಲ ಹಂತದಲ್ಲಿ 1,000 ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಪ್ರತಿನಿಧಿಗಳ ಸಭೆಯಲ್ಲಿ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಒಟ್ಟು 2,000 ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಚಿಂತನೆಯಿದೆ. 6,000 ಪಂಚಾಯಿತಿಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದ್ದು, ಆರಂಭದಲ್ಲಿ 1,000 ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಮುಂದಿನ ನಾಲ್ಕೈದು ವರ್ಷಗಳಲ್ಲಿ ಈ ಪ್ರಯತ್ನದ ಉತ್ತಮ ಫಲಿತಾಂಶ ನಿರೀಕ್ಷಿಸಲಾಗಿದೆ ಎಂದರು.
ರಾಜ್ಯದಲ್ಲಿ ವಾರ್ಷಿಕವಾಗಿ ಸುಮಾರು ₹8,800 ಕೋಟಿ ಸಿಎಸ್ಆರ್ ನಿಧಿ ಲಭ್ಯವಿದೆ. ಕಂಪನಿಗಳ ಆಡಳಿತ ಮಂಡಳಿಗಳೊಂದಿಗೆ ಚರ್ಚಿಸಿ, ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಈ ನಿಧಿಯನ್ನು ಆದ್ಯತೆಯ ಮೇರೆಗೆ ಬಳಸುವಂತೆ ಮನವಿ ಮಾಡಲಾಗಿದೆ. ಖಾಸಗಿ ಶಾಲೆಗಳು ತಮ್ಮ ಆರ್ಥಿಕ ಸಾಮರ್ಥ್ಯಕ್ಕೆ ಅನುಗುಣವಾಗಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಬಹುದು. ಒಂದು ಖಾಸಗಿ ಶಾಲೆಗೆ ಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಲು ಅವಕಾಶವಿದೆ ಎಂದು ಹೇಳಿದರು.

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 30 ಶಾಲೆಗಳಲ್ಲಿ ಸಿಎಸ್ಆರ್ ನಿಧಿಯಡಿ ಅಭಿವೃದ್ಧಿ ಕಾರ್ಯಗಳು ಆರಂಭವಾಗಿವೆ. ಟೊಯೊಟಾ ಕಂಪನಿಯು ರಾಮನಗರ ಜಿಲ್ಲೆಯಲ್ಲಿ 23 ಶಾಲೆಗಳ ನಿರ್ಮಾಣಕ್ಕೆ ನೆರವಾಗುತ್ತಿದ್ದು, ಪ್ರತಿ ಶಾಲೆಗೆ ₹10ರಿಂದ ₹15 ಕೋಟಿ ಹೂಡಿಕೆ ಮಾಡುತ್ತಿದೆ ಎಂದು ತಿಳಿಸಿದರು.
ಕೆಪಿಎಸ್ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ವಿಶ್ವಬ್ಯಾಂಕ್ನಿಂದ ₹2,000 ಕೋಟಿ ಸಾಲ ಪಡೆಯಲಾಗಿದೆ. ಸರ್ಕಾರಿ ಶಾಲೆಗಳಲ್ಲಿಯೂ ಶಿಕ್ಷಕರ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.
ದೇಶದ 140 ಅಂತರರಾಷ್ಟ್ರೀಯ ಗುಣಮಟ್ಟದ ಶಾಲೆಗಳಲ್ಲಿ 38 ಕರ್ನಾಟಕದಲ್ಲಿವೆ. ಗ್ರಾಮೀಣ ಮಕ್ಕಳಿಗೆ ಹಳ್ಳಿಗಳಲ್ಲಿಯೇ ಗುಣಮಟ್ಟದ ಶಿಕ್ಷಣ ದೊರೆತರೆ ವಿದ್ಯಾಭ್ಯಾಸಕ್ಕಾಗಿ ನಗರಗಳಿಗೆ ಬರುವ ಒತ್ತಡ ಕಡಿಮೆಯಾಗಲಿದೆ. ಖಾಸಗಿ ಶಾಲೆಗಳು ತಮ್ಮ ಶಿಕ್ಷಣದ ಗುಣಮಟ್ಟ ಮತ್ತು ಸಂಪನ್ಮೂಲಗಳನ್ನು ಸರ್ಕಾರಿ ಶಾಲೆಗಳಿಗೂ ವಿಸ್ತರಿಸಬೇಕು. ತಮ್ಮ ಊರಿನ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಗೆ ಕೈಜೋಡಿಸುವುದು ಎಲ್ಲರ ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಮನವಿ ಮಾಡಿದರು.


Comments (0)