ಪ್ರಥಮ ಪಿಯುಸಿ ಪರೀಕ್ಷೆಗೆ ರಾಜ್ಯಮಟ್ಟದ ಪ್ರಶ್ನೆಪತ್ರಿಕೆ, ಏಕರೂಪದ ವೇಳಾಪಟ್ಟಿ; ಪರೀಕ್ಷೆ, ಮೌಲ್ಯಮಾಪನ ಕಾಲೇಜುಗಳಲ್ಲೇ

ಬೆಂಗಳೂರು: ಪದವಿ ಪೂರ್ವ ಶಿಕ್ಷಣದ ಗುಣಮಟ್ಟ ಸುಧಾರಿಸುವ ಉದ್ದೇಶದಿಂದ 2027ರಲ್ಲಿ ನಡೆಯಲಿರುವ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ರಾಜ್ಯಮಟ್ಟದಲ್ಲಿ ಸಿದ್ಧಪಡಿಸಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಜವಾಬ್ದಾರಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಗೆ (KSEAB) ವಹಿಸಿ ಆದೇಶ ಹೊರಡಿಸಲಾಗಿದೆ. ಆದರೆ ಪರೀಕ್ಷೆಯನ್ನು ಮಂಡಳಿ ನಡೆಸುವುದಿಲ್ಲ. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನೇತೃತ್ವದಲ್ಲೇ ಪರೀಕ್ಷೆ ನಡೆಯಲಿದೆ.

ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಿಗೆ ಅನ್ವಯವಾಗುವಂತೆ ಏಕರೂಪದ ಪರೀಕ್ಷಾ ವೇಳಾಪಟ್ಟಿ ರೂಪಿಸಲಾಗುತ್ತದೆ. ಪರೀಕ್ಷೆಯ ದಿನದಂದು ಪ್ರಶ್ನೆಪತ್ರಿಕೆಗಳನ್ನು ಡಿಜಿಟಲ್ ರೂಪದಲ್ಲಿ ಕಾಲೇಜುಗಳಿಗೆ ಕಳುಹಿಸಲಾಗುತ್ತದೆ. ಪ್ರಾಯೋಗಿಕ ಪರೀಕ್ಷೆಗಳು ಮಾತ್ರ ಜಿಲ್ಲಾಮಟ್ಟದಲ್ಲಿ ಸಿದ್ಧಪಡಿಸಿದ ವೇಳಾಪಟ್ಟಿಯಂತೆ ನಡೆಯಲಿವೆ.

ರಾಜ್ಯಮಟ್ಟದಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದರೂ ಮೌಲ್ಯಮಾಪನ ಕಾಲೇಜು ಹಂತದಲ್ಲೇ ನಡೆಯಲಿದೆ. ಫಲಿತಾಂಶವನ್ನು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು ಪರಿಶೀಲಿಸಿ ಅನುಮೋದಿಸಿದ ಬಳಿಕ ಪ್ರಕಟಿಸಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.

ಈ ಕ್ರಮದಿಂದ ಪ್ರಥಮ ಪಿಯುಸಿ ಹಂತದಲ್ಲೇ ಶಿಕ್ಷಣದ ಗುಣಮಟ್ಟವನ್ನು ಮೇಲ್ವಿಚಾರಣೆ ಮಾಡಲು ಸಾಧ್ಯವಾಗಲಿದ್ದು, ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೂ ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು, ಕಾಲೇಜು ಆಡಳಿತ ಮಂಡಳಿಗಳು ಹಾಗೂ ಪೋಷಕರು ಈ ಬದಲಾವಣೆಯನ್ನು ಗಮನಿಸಬೇಕು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

Related Articles

Comments (0)