ದಸರಾ ಅಂಗವಾಗಿ ಸೆ.26 ರಿಂದ ಕೆಆರ್‌ಎಸ್ ನಲ್ಲಿ ಕಾವೇರಿ ಆರತಿ
- by Suddi Team
- September 24, 2025
- 27 Views

ಬೆಂಗಳೂರು: ತೀವ್ರ ವಿರೋಧದ ನಡುವೆಯೂ ಸ್ಯಾಂಕಿ ಕೆರೆಯಲ್ಲಿ ಸಾಂಕೇತಿಕವಾಗಿ ಕಾವೇರಿ ಆರತಿ ಮಾಡಿದ್ದ ಸರ್ಕಾರ ಇದೀಗ ಸೆಪ್ಟೆಂಬರ್ 26 ರಿಂದ ಐದು ದಿನಗಳ ಕಾಲ ಕನ್ನಡ ನಾಡಿನ ಜೀವನದಿ “ಕಾವೇರಿ ಆರತಿ” ಎಂಬ ಭವ್ಯ ಕಾರ್ಯಕ್ರಮವನ್ನು ಕೆಆರ್ ಎಸ್ ನಲ್ಲಿ ಆಯೋಜನೆ ಮಾಡಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ,ಕಾರ್ಯಕ್ರಮ ಸಂಪೂರ್ಣ ವಿವರವನ್ನು ನೀಡಿದ್ದಾರೆ. ದಸರಾ ಸಂಭ್ರಮದ ನಡುವೆ ಕಾವೇರಿ ಆರತಿ ಕಾರ್ಯಕ್ರಮವೂ ಜರುಗಲಿದೆ.
26 ರ ಶುಕ್ರವಾರ ಸಂಜೆ 5 ಗಂಟೆಗೆ ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ. ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ವೀರ ಸಿಂಹಾಸನ ಮಹಾ ಸಂಸ್ಥಾನ ಮಠಾಧ್ಯಕ್ಷ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ, ಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮೀಜಿ, ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರುಗಳಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ, ರವಿಕುಮಾರ್ ಗಣಿಗ, ಕೆ.ಎನ್.ಉದಯ್, ದರ್ಶನ್ ಪುಟ್ಟಣ್ಣಯ್ಯ, ಮಧು ಮಾದೇಗೌಡ, ದಿನೇಶ್ ಗೂಳಿಗೌಡ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ನೀರಾವರಿ ನಿಗಮದ ಅಧಿಕಾರಿಗಳು ಪಾಲ್ಗೊಳ್ಳುವರು ಎಂದು ವಿವರ ಒದಗಿಸಿದ್ದಾರೆ.
ಹಿನ್ನೆಲೆ:
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2024ರಲ್ಲಿ ಕೆಆರ್ ಎಸ್ ನಲ್ಲಿ ಕಾವೇರಿಗೆ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕಾವೇರಿ ಆರತಿ ವಿಷಯವನ್ನು ಘೋಷಣೆ ಮಾಡಿದ್ದರು. ಅದರಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದ ಶಾಸಕರ ನಿಯೋಗ ವಾರಣಾಸಿ ಮತ್ತು ಹರಿದ್ವಾರಕ್ಕೆ ಭೇಟಿ ನೀಡಿ ಗಂಗಾರತಿಯನ್ನು ವೀಕ್ಷಿಸಿ ಸರ್ಕಾರಕ್ಕೆ ವರದಿ ನೀಡಿತ್ತು. ಆ ಪ್ರಕಾರ ಸರ್ಕಾರ ಕಾವೇರಿ ಆರತಿ ಮಾಡಲು ತೀರ್ಮಾನಿಸಿ, ಸುಮಾರು 10 ಸಾವಿರ ಜನರು ಭವ್ಯ ಕಾರ್ಯಕ್ರಮ ವೀಕ್ಷಣೆ ಮಾಡಬಹುದಾದ ಬೃಹತ್ ಸ್ಟೇಡಿಯಂ ನಿರ್ಮಿಸಲು ಸಚಿವ ಸಂಪುಟ ಅನುಮೋದನೆ ನೀಡಿತು.
ಈ ಬಾರಿಯ ದಸರಾದಲ್ಲಿ ಸಾಂಕೇತಿಕವಾಗಿ 5 ದಿನಗಳ ಕಾಲ ಕೆಆರ್ ಎಸ್ ನಲ್ಲಿ ಕಾವೇರಿ ತಾಯಿಗೆ ಆರತಿ ಮಾಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಮಳೆ, ಬೆಳೆ ಒಳ್ಳೆಯದಾಗಲಿ, ರಾಜ್ಯಕ್ಕೆ ಸನ್ಮಂಗಳವಾಗಲಿ ಎಂದು ತಾಯಿ ಕಾವೇರಿಯಲ್ಲಿ ಪೂಜೆ ಮಾಡಿ ಪ್ರಾರ್ಥಿಸಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.
ಕಾವೇರಿ ಆರತಿಯ ವಿಧಿ ವಿಧಾನಗಳು:
* 13 ಜನರಿಂದ ಆರತಿ. ಅವರಿಗೆ ತಲಾ ಇಬ್ಬರು ಸಹಾಯಕರು ಸೇರಿ ಒಟ್ಟು 40 ಜನರ ತಂಡ ಪೂಜೆಯಲ್ಲಿ ಭಾಗಿ.
* ಮೊದಲು “ವಾತಾಪಿ ಗಣಪತಿಂ ಭಜೆ” ಮಂಗಳವಾದ್ಯದಿಂದ ಪೂಜೆ ಪ್ರಾರಂಭ.
* ಕಾವೇರಿ ಪ್ರಾರ್ಥನೆ, ಗಣಪತಿ ಪ್ರಾರ್ಥನೆ, ಗುರು ಪ್ರಾರ್ಥನೆ, ಸಂಕಲ್ಪ.
* ಕಾವೇರಿ ಸ್ತೊತ್ರದ ಮೂಲಕ ತೀರ್ಥಕ್ಕೆ ಪೂಜೆ, ಬಾಗಿನ ಅರ್ಪಣೆ.
* ಬ್ರಹ್ಮ, ವಿಷ್ಣು, ಮಹೇಶ್ವರರ ಪ್ರಾರ್ಥನೆ, ಚಾಮರ ಸೇವೆ.
* ಮೂರು ದಿಕ್ಕಿಗೂ ಶಂಖನಾದ, ದೂಪದ ಆರತಿ ಹಾಗೂ ಮಂತ್ರ ಪುಷ್ಪ ಪಠಣ
* ಕೊನೆಯಲ್ಲಿ ಕುಂಭಾರತಿ, ನಾಗಾರತಿ, ಕಾವೇರಿ ಆರತಿಯೊಂದಿಗೆ ಪೂಜಾ ಕೈಂಕರ್ಯ ಸಂಪನ್ನ..
Related Articles
Thank you for your comment. It is awaiting moderation.
Comments (0)