ಬೆಂಗಳೂರು ನಗರದಲ್ಲಿ ಮಹಿಳಾ ಸುರಕ್ಷತೆ, ಅಪರಾಧ ನಿಯಂತ್ರಣಕ್ಕೆ ಆದ್ಯತೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
- by Suddi Loka
- November 21, 2026
- 11 Views
ಬೆಂಗಳೂರು: ಬೆಂಗಳೂರು ನಗರದ ಕಾನೂನು ಮತ್ತು ಸುವ್ಯವಸ್ಥೆ, ಮಹಿಳಾ ಸುರಕ್ಷತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಮಹತ್ವದ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರು ಪೊಲೀಸ್ ಇಲಾಖೆಯ ನೂತನ ಪೊಲೀಸ್ ಆಯುಕ್ತರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಹೊಸ ಪೊಲೀಸ್ ಆಯುಕ್ತರೇಟ್ಗಳ ವ್ಯಾಪ್ತಿಯನ್ನು ಸ್ಪಷ್ಟವಾಗಿ ಗುರುತಿಸಿ, ಆಡಳಿತ ಮತ್ತು ಕಾರ್ಯಾಚರಣೆಯಲ್ಲಿ ಸಮನ್ವಯ ಸಾಧಿಸುವಂತೆ ಸೂಚಿಸಲಾಗಿದೆ ಎಂದರು.
ಬೆಂಗಳೂರು ಐಟಿ-ಬಿಟಿ ಹಬ್ ಆಗಿರುವುದರಿಂದ ಮಹಿಳಾ ಉದ್ಯೋಗಿಗಳು, ಟೆಕ್ಕಿಗಳು ಮತ್ತು ಹೂಡಿಕೆದಾರರ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಬೇಕು. ದ್ವೇಷ ಭಾಷಣಗಳಿಗೆ ಕಡಿವಾಣ ಹಾಕುವುದರ ಜತೆಗೆ ನೈತಿಕ ಪೊಲೀಸ್ಗಿರಿಯನ್ನು ಯಾವುದೇ ಕಾರಣಕ್ಕೂ ಸಹಿಸಬಾರದು ಎಂದು ನಿರ್ದೇಶನ ನೀಡಲಾಗಿದೆ.
ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಮುಖ ರೌಡಿಶೀಟರ್ಗಳನ್ನು ಗುರುತಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸಬೇಕು. ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಗಮನ ನೀಡಬೇಕು. ಡ್ಯಾನ್ಸ್ ಬಾರ್ಗಳು, ಕ್ಲಬ್ಗಳು ಮತ್ತು ಪಬ್ಗಳ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇರಿಸಬೇಕು ಎಂದು ಸೂಚಿಸಲಾಗಿದೆ.

ಅಪಾರ್ಟ್ಮೆಂಟ್ಗಳು, ಖಾಸಗಿ ಬಡಾವಣೆಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ರಾತ್ರಿ ವೇಳೆ ಮಹಿಳೆಯರು ಮತ್ತು ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಮಾಡಬೇಕು. ಸಂಚಾರ ನಿರ್ವಹಣೆ, ಪೊಲೀಸ್ ಗಸ್ತು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸರ ಗೋಚರತೆಯನ್ನು ಹೆಚ್ಚಿಸುವಂತೆಯೂ ಸೂಚಿಸಲಾಗಿದೆ.
ನಗರದ ಎಲ್ಲ ಪೊಲೀಸ್ ಠಾಣೆಗಳ ಕಾರ್ಯಕ್ಷಮತೆ ಮೌಲ್ಯಮಾಪನಕ್ಕೆ ರೇಟಿಂಗ್ ವ್ಯವಸ್ಥೆ ರೂಪಿಸಲಾಗುವುದು. ಪ್ರತಿ ತಿಂಗಳು ಪರಿಶೀಲನಾ ಸಭೆ ನಡೆಸಲಾಗುವುದು. ಪೊಲೀಸ್ ಸಿಬ್ಬಂದಿ ಕೊರತೆ ನೀಗಿಸಲು ಪ್ರತಿ ವರ್ಷ ನೇಮಕಾತಿ ನಡೆಸುವ ವ್ಯವಸ್ಥಿತ ನೀತಿ ರೂಪಿಸಲಾಗಿದೆ. ಈಗಾಗಲೇ ಸುಮಾರು 8,000 ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಐದು ಪೊಲೀಸ್ ಆಯುಕ್ತರೇಟ್ಗಳ ರಚನೆಯ ಬಳಿಕ ಹೆಚ್ಚಿರುವ ನಿರೀಕ್ಷೆಗಳಿಗೆ ಅನುಗುಣವಾಗಿ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಬೇಕು ಎಂದು ತಿಳಿಸಲಾಗಿದೆ.
ಪೊಲೀಸ್ ಸಿಬ್ಬಂದಿಯ ವಸತಿ ಸೇರಿದಂತೆ ಕಲ್ಯಾಣ ಸೌಲಭ್ಯಗಳಿಗೂ ಗಮನ ನೀಡಬೇಕು. ಗೃಹ ಇಲಾಖೆಯ ಅಧೀನದಲ್ಲಿರುವ ಐದು ಆಯೋಗಗಳು ತಮ್ಮ ಉದ್ದೇಶಿತ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.
ಪೊಲೀಸ್ ಇಲಾಖೆ ಕೇವಲ ಕಾನೂನು ಜಾರಿಗೊಳಿಸುವ ವ್ಯವಸ್ಥೆಯಲ್ಲ; ಜನರ ಸುರಕ್ಷತೆ ಮತ್ತು ಪ್ರಜಾಸೇವೆಯ ಪ್ರಮುಖ ಹೊಣೆಗಾರಿಕೆಯನ್ನು ಹೊಂದಿದೆ. ಬೆಂಗಳೂರು ನಗರದ ಭದ್ರತೆ, ಮಹಿಳೆಯರ ಸುರಕ್ಷತೆ, ಹೂಡಿಕೆದಾರರ ವಿಶ್ವಾಸ ಹಾಗೂ ಸಾರ್ವಜನಿಕರ ನೆಮ್ಮದಿಯನ್ನು ಕಾಪಾಡಲು ಪೊಲೀಸ್ ಇಲಾಖೆ ಇನ್ನಷ್ಟು ಸಮರ್ಥವಾಗಿ ಕಾರ್ಯನಿರ್ವಹಿಸಬೇಕು ಎಂದು ಗೃಹ ಸಚಿವರು ಹೇಳಿದ್ದಾರೆ.


Comments (0)