ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ ನಿರ್ಮಾಣಕ್ಕೆ ಚಿಂತನೆ: ಸಚಿವ ಎನ್‌ ಎಸ್‌ ಭೋಸರಾಜು

ಹೊಸಪೇಟೆ: ವಿಶ್ವಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌. ಭೋಸರಾಜು ತಿಳಿಸಿದರು.

ಕಲ್ಯಾಣ ಕರ್ನಾಟಕದ ಜನಪ್ರಿಯ ಪ್ರವಾಸಿ ತಾಣವಾವಿರುವ ವಿಜಯನಗರ ಜಿಲ್ಲೆಯ ಕಮಲಾಪುರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ನೂತನ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸ್ಥಳಕ್ಕೆ ಸಚಿವರು ಸೋಮವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ:
ಕಮಲಾಪುರದ ಪ್ರಮುಖ ಜಾಗವನ್ನು ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಾಣಕ್ಕೆ ಜಾಗವನ್ನು ಮಂಜೂರು ಮಾಡಲಾಗಿದೆ. ಪ್ರಮುಖ ರಸ್ತೆಯಲ್ಲಿ 10 ಎಕರೆ ಜಾಗ ಮಂಜೂರಾಗಿದ್ದು ಉತ್ತಮ ವಿನ್ಯಾಸದ ಮೂಲಕ ಜಾಗದ ಸದುಪಯೋಗ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಕಲ್ಯಾಣ ಕರ್ನಾಟಕದ ಅತಿದೊಡ್ಡ ಹಾಗೂ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯವನ್ನು ಇಲ್ಲಿ ನಿರ್ಮಿಸಲು ಯೋಜಿಸಲಾಗಿದೆ. 12 ಮೀಟರ್‌ ನಾನೋಸೀಮ್ ಡೋಮ್‌‌ ತಾರಾಲಯ ಹಾಗೂ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಈ ಜಾಗವನ್ನು ನೀಡಿದೆ ಎಂದು ಸಚಿವರು ತಿಳಿಸಿದರು.

ಪ್ರತಿ ಜಲ್ಲೆಯಲ್ಲೂ ತಾರಾಲಯ, ವಿಜ್ಞಾನ ಕೇಂದ್ರ ನಿರ್ಮಾಣ:
ಕಲ್ಯಾಣ ಕರ್ನಾಟಕ ಭಾಗದ ಯುವ ಜನರಲ್ಲಿ ವೈಜ್ಞಾನಿಕ ಮನೋಭಾವ, ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯದಂತೆ
ಪ್ರತಿ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸಲಾಗುತ್ತಿದೆ. ಯುನೆಸ್ಕೋ ಪಾರಂಪರಿಕ ತಾಣವಾಗಿರುವ ಹಂಪಿಯಲ್ಲಿ ಉತ್ತಮ ದರ್ಜೆಯ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಎನ್‌.ಎಸ್‌‌ ಭೋಸರಾಜು ತಿಳಿಸಿದರು.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್‌ನ) ವ್ಯವಸ್ಥಾಪಕ ನಿರ್ದೇಶಕರಾದ ಸದಾಶಿವ ಪ್ರಭು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Comments (0)

Leave a Comment