
ಬೆಂಗಳೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಅಸಹಜ ರೀತಿಯಲ್ಲಿ ಸಾವಿಗೀಡಾದ ಐದು ಹುಲಿಗಳ ಮರಣೋತ್ತರ ಪರೀಕ್ಷೆ ನೆರವೇರಿದ್ದು,ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಹುಲಿಗಳ ಅಂತಿಮ ಸಂಸ್ಕಾರದ ನಂತರ ಮಾಹಿತಿ ನೀಡಿದ ಸಚಿವರು,ಮಲೆ ಮಹದೇಶ್ವರ ಬೆಟ್ಟದ ಹೂಗ್ಯಂ ವಲಯದಲ್ಲಿ ಸಂಭವಿಸಿದ ಐದು ಹುಲಿಗಳ ಸಾವಿನ ಘಟನೆ ಅತೀವ ನೋವು ತಂದಿದೆ. ಒಂದು ದಿನದಲ್ಲೇ 5 ಹುಲಿಗಳು ಸಾವಿಗೀಡಾಗಿರುವುದು ಹೃದಯ ವಿದ್ರಾವಕ ಘಟನೆ. ಈ ದುರ್ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಘಟನೆ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಷಪ್ರಾಶನದಿಂದ ಸಾವನ್ನಪ್ಪಿದ್ದ ಲಕ್ಷಣಗಳು ತಜ್ಞರಿಂದ ವ್ಯಕ್ತವಾಗಿವೆ. ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರ (NTCA) ಅಧಿಕಾರಿಗಳು, ವನ್ಯಜೀವಿ ತಜ್ಞರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ ಎಂದರು.
ಉನ್ನತ ಮಟ್ಟದ ತನಿಖೆಗೆ ಈಗಾಗಲೇ ಆದೇಶ ನೀಡಲಾಗಿದೆ. ಮರಣೋತ್ತರ ಪರೀಕ್ಷೆ ನೆರವೇರಿದ್ದು, ಪ್ರೋಟೋಕಾಲ್ ಪ್ರಕಾರ ಹುಲಿಗಳ ಅಂತಿಮ ಸಂಸ್ಕಾರವೂ ಆಗಿದೆ. ವರದಿ ಬಂದ ಬಳಿಕ ಇನ್ನಷ್ಟು ಕ್ರಮ ಕೈಗೊಳ್ಳಲಾಗುವುದು ಎಂದರು.
ವನ್ಯಜೀವಿ ಸಂರಕ್ಷಣೆಯತ್ತ ನಮ್ಮ ನಿಷ್ಠೆ ಬದ್ಧವಾಗಿದೆ. ಎಲ್ಲರ ಸಹಕಾರದಿಂದ ಅರಣ್ಯ ಸಂರಕ್ಷಣೆಯನ್ನು ಇನ್ನಷ್ಟು ಬಲಪಡಿಸೋಣ ಎಂದು ಕರೆ ನೀಡಿದರು.
Related Articles
Thank you for your comment. It is awaiting moderation.
Comments (0)