ಎಸ್‌ಸಿಪಿ-ಟಿಎಸ್‌ಪಿ ಅನುದಾನ ಅರ್ಹ ಫಲಾನುಭವಿಗಳಿಗೆ ತಲುಪಿಸಿ: ಅಧಿಕಾರಿಗಳಿಗೆ ಸಚಿವ ಟಿ. ರಘುಮೂರ್ತಿ ಸೂಚನೆ
- by Suddi Loka
- November 14, 2026
- 3 Views
ಕೊಪ್ಪಳ: ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ದುರ್ಬಲ ವರ್ಗಗಳ ಅಭಿವೃದ್ಧಿಗೆ ಸಮರ್ಪಕವಾಗಿ ಬಳಸಿ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಬೇಕು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ ಅಧಿಕಾರಿಗಳಿಗೆ ಸೂಚಿಸಿದರು.
ನವೆಂಬರ್ 13ರಂದು ಜಿಲ್ಲಾ ಪಂಚಾಯಿತಿ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆದ ಎಸ್‌ಸಿಪಿ-ಟಿಎಸ್‌ಪಿ ಯೋಜನೆಗಳ ಅಕ್ಟೋಬರ್ 2026ರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ಇಲಾಖೆಗೆ ಮೀಸಲಿಟ್ಟ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಒಂದೇ ವ್ಯಕ್ತಿಗೆ ಪದೇಪದೇ ಸೌಲಭ್ಯ ನೀಡುವ ಬದಲು, ಹಿಂದಿನ ವರ್ಷದ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಿ ಸೌಲಭ್ಯ ವಂಚಿತರಿಗೆ ಅವಕಾಶ ಕಲ್ಪಿಸಬೇಕು. ಪ್ರತಿ ಆರ್ಥಿಕ ವರ್ಷಕ್ಕೆ ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ಎಸ್‌ಸಿ-ಎಸ್‌ಟಿ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಸ್ವಚ್ಛತೆ, ಗುಣಮಟ್ಟದ ಆಹಾರ ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
2023ರಿಂದ ಇದುವರೆಗೆ ಅನುಷ್ಠಾನಗೊಂಡಿರುವ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳ ಪ್ರಗತಿ ವಿವರಗಳನ್ನು ಛಾಯಾಚಿತ್ರಗಳೊಂದಿಗೆ ಇಲಾಖೆಗಳ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಸೂಚಿಸಿದರು.
ಸಭೆಯಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Comments (0)