ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗುಡ್ ನ್ಯೂಸ್; ₹2 ಸಾವಿರ ಗೌರವ ಸಂಭಾವನೆ ಹೆಚ್ಚಳ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ, ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ 2 ಸಾವಿರ ರೂ. ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಈ ಸಾಲಿನ ಬಜೆಟ್‌ನಲ್ಲಿ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವಧನವನ್ನು 2,000 ರೂ. ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು. ಅದರಂತೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಗುರುವಾರ (ಮೇ 15) ಗೌರವಧನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, 2025-26ನೇ ಸಾಲಿನಲ್ಲಿ ನೇಮಕಗೊಳ್ಳುವ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಅನ್ವಯಿಸಲಿದೆ.

ಸರ್ಕಾರದ ಆದೇಶಾನುಸಾರ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಮಾಸಿಕ ಗೌರವಧನ ತಲಾ 2,000 ರೂ. ಏರಿಕೆಯಾಗಲಿದ್ದು, ಕಳೆದ ಸಾಲಿನಲ್ಲಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಇದ್ದ ಮಾಸಿಕ 10 ಸಾವಿರ ರೂ. ಗೌರವಧನ 12 ಸಾವಿರ ರೂ.ಗಳಿಗೆ ಹೆಚ್ಚಳವಾಗಲಿದೆ. ಪ್ರೌಢ ಶಾಲಾ ಅತಿಥಿ ಶಿಕ್ಷಕರಿಗೆ ಈಗ ಇರುವ 10,500 ರೂ. ಗೌರವಧನ 12,500 ರೂ.ಗೆ ಏರಿಕೆಯಾಗಲಿದೆ. ಅದೇ ರೀತಿ ಮಾಸಿಕ 12 ಸಾವಿರ ರೂ. ಗೌರವ ಧನ ಪಡೆಯುತ್ತಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರು ಇನ್ನು ಮುಂದೆ 14 ಸಾವಿರ ರೂ. ಪಡೆಯಲಿದ್ದಾರೆ.

ಈ ಹಿಂದೆ 2022ರ ಜೂನ್‌ನಲ್ಲಿ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವಧನ ಹೆಚ್ಚಿಸಲಾಗಿತ್ತು. ಆನಂತರ, 2023ರಲ್ಲೂ ಗೌರವಧನ ಹೆಚ್ಚಿಸಲು ಶಿಕ್ಷಣ ಇಲಾಖೆ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ, ಸರ್ಕಾರ ಪರಿಗಣಿಸಿರಲಿಲ್ಲ. ಇದೀಗ ಎರಡು ವರ್ಷಗಳ ಬಳಿಕ ಗೌರವಧನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

Related Articles

Comments (0)

Leave a Comment