ಸಾರಿಗೆ ಸಚಿವರಾಗಿ ಬೈರತಿ ಸುರೇಶ್ ಅಧಿಕಾರ ಸ್ವೀಕಾರ: ಶಕ್ತಿ ಯೋಜನೆಗೆ ಬರಲಿದೆ ‘ಸ್ಮಾರ್ಟ್ ಕಾರ್ಡ್’, ಜಾಗತಿಕ ಟೆಂಡರ್‌ಗೆ ಮುಹೂರ್ತ!

ಬೆಂಗಳೂರು:ರಾಜ್ಯದ ನೂತನ ಸಾರಿಗೆ ಸಚಿವರಾಗಿ ಬೈರತಿ ಸುರೇಶ್ ಅವರು ವಿಧಾನಸೌಧದ ತಮ್ಮ ಅಧಿಕೃತ ಕೊಠಡಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ಹಿತೈಷಿಗಳು ಹಾಗೂ ಅಭಿಮಾನಿಗಳು ನೂತನ ಸಚಿವರಿಗೆ ಪುಷ್ಪಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಚಿವರು ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆಗೆ ಮುಂದಾಗಿದ್ದಾರೆ.

ನಾಲ್ಕೂ ನಿಗಮಗಳ ಅಧಿಕಾರಿಗಳೊಂದಿಗೆ ಮಹತ್ವದ ಸಭೆ

ಅಧಿಕಾರ ಸ್ವೀಕರಿಸಿದ ನಂತರ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಕೇಂದ್ರ ಕಚೇರಿಗೆ ಭೇಟಿ ನೀಡಿದರು. ಅಲ್ಲಿ ಕೆಎಸ್ಸಾರ್ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ವಾಯವ್ಯ ಸಾರಿಗೆ ನಿಗಮಗಳ (NWKRTC) ಮುಖ್ಯಸ್ಥರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿ, ಇಲಾಖೆಯ ಸದ್ಯದ ಪರಿಸ್ಥಿತಿ ಹಾಗೂ ಕಾರ್ಯವೈಖರಿಯ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು.

ಶಕ್ತಿ ಯೋಜನೆಯಿಂದ ಶೇ. 40 ರಷ್ಟು ಪ್ರಯಾಣಿಕರ ಸಂಖ್ಯೆ ಹೆಚ್ಚಳ

ಸಭೆಯ ಬಳಿಕ ಮಾತನಾಡಿದ ಸಚಿವರು, “ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಜನಸಾಮಾನ್ಯರ ಬದುಕನ್ನು ಹಸನಾಗಿಸಿವೆ. ಅದರಲ್ಲೂ ಮಹಿಳೆಯರ ಉಚಿತ ಬಸ್ ಪ್ರಯಾಣದ ‘ಶಕ್ತಿ ಯೋಜನೆ’ಯನ್ನು ಕೋಟ್ಯಂತರ ಮಹಿಳೆಯರು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಯೋಜನೆ ಜಾರಿಗೆ ಬಂದ ನಂತರ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಶೇಕಡಾ 40 ರಷ್ಟು ಗಣನೀಯವಾಗಿ ಹೆಚ್ಚಳವಾಗಿದೆ” ಎಂದು ಸಂತಸ ವ್ಯಕ್ತಪಡಿಸಿದರು.

ಶಕ್ತಿ ಯೋಜನೆಗೆ ಹೈಟೆಕ್ ಸ್ಪರ್ಶ: ಶೀಘ್ರದಲ್ಲೇ ಸ್ಮಾರ್ಟ್ ಕಾರ್ಡ್ ವಿತರಣೆ

ಮಹಿಳೆಯರ ಉಚಿತ ಪ್ರಯಾಣದ ಈ ಶಕ್ತಿ ಯೋಜನೆಯನ್ನು ಇನ್ನಷ್ಟು ಸರಳಗೊಳಿಸಲು ಮತ್ತು ಪರಿಣಾಮಕಾರಿಯಾಗಿ ಜಾರಿಗೊಳಿಸಲು ರಾಜ್ಯದ ಮಹಿಳೆಯರಿಗೆ ಹಂತ-ಹಂತವಾಗಿ ‘ಸ್ಮಾರ್ಟ್ ಕಾರ್ಡ್’ ವಿತರಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಚಿವರು ಪ್ರಕಟಿಸಿದರು.

ಮಹಿಳೆಯರಿಗೆ ಉಚಿತ ಕಾರ್ಡ್: ರಾಜ್ಯದ ಸುಮಾರು 3 ಕೋಟಿಗೂ ಅಧಿಕ ಮಹಿಳೆಯರಿಗೆ ಈ ಸ್ಮಾರ್ಟ್ ಕಾರ್ಡ್‌ಗಳನ್ನು ಸಂಪೂರ್ಣ ಉಚಿತವಾಗಿ ವಿತರಿಸುವ ಗುರಿ ಹೊಂದಲಾಗಿದೆ.

ಪುರುಷರಿಗೂ ಮೆಟ್ರೋ ಮಾದರಿ ಕಾರ್ಡ್: ಮಹಿಳೆಯರ ಜೊತೆಗೆ ಪುರುಷ ಪ್ರಯಾಣಿಕರೂ ಸಹ ಮೆಟ್ರೋ ಕಾರ್ಡ್ ಮಾದರಿಯಲ್ಲಿ ಹಣ ಪಾವತಿಸಿ ಈ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆದುಕೊಳ್ಳಬಹುದು. ಇದರಲ್ಲಿ ಹಣ ಖಾಲಿಯಾದ ನಂತರ ರೀಚಾರ್ಜ್ ಮಾಡಿಕೊಳ್ಳುವ ಸೌಲಭ್ಯ ಇರಲಿದೆ.

ಜಾಗತಿಕ ಟೆಂಡರ್‌ಗೆ ಸಚಿವರ ಸೂಚನೆ

ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಅಂದರೆ ಸುಮಾರು 3 ಕೋಟಿ ಸ್ಮಾರ್ಟ್ ಕಾರ್ಡ್‌ಗಳನ್ನು ಸಿದ್ಧಪಡಿಸಬೇಕಿರುವುದರಿಂದ, ಪಾರದರ್ಶಕತೆಗಾಗಿ ಜಾಗತಿಕ ಟೆಂಡರ್ (Global Tender) ಕರೆಯಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆರಂಭಿಕ ಹಂತದಲ್ಲಿ ಪ್ರಾಯೋಗಿಕವಾಗಿ (Pilot Project) ಕೆಲವು ಜಿಲ್ಲೆಗಳಲ್ಲಿ ಈ ಸ್ಮಾರ್ಟ್ ಕಾರ್ಡ್ ವಿತರಣಾ ಪ್ರಕ್ರಿಯೆಯನ್ನು ಸದ್ಯದಲ್ಲೇ ಆರಂಭಿಸುವಂತೆ ಸಚಿವರು ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

1000 ಬಸ್ ಖರೀದಿ

ರಾಜ್ಯ ಸರ್ಕಾರದ ಅನುದಾನದಡಿಯಲ್ಲಿ 1000 ಸಾವಿರ ಬಸ್ ಗಳನ್ನು ಖರೀದಿಸಲಾಗುತ್ತದೆ. ಇದೇ ವೇಳೆ, ಕೇಂದ್ರ ಸರ್ಕಾರದ ಅನುದಾನದಲ್ಲಿ 4 ಸಾವಿರ ಎಲೆಕ್ಟ್ರಿಕ್ ಬಸ್ ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಹಂತಹಂತವಾಗಿ ಬಸ್ ಗಳನ್ನು ಖರೀದಿಸಿ ನಾಲ್ಕೂ ನಿಗಮಗಳಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ಬೈರತಿ ಸುರೇಶ್ ಹೇಳಿದರು.

ನಿರ್ಭಯಕ್ಕೆ ಹೆಚ್ಚು ಆದ್ಯತೆ

ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಸುರಕ್ಷತೆಗೆ ಆದ್ಯತೆಯನ್ನು ನೀಡಲಾಗುತ್ತಿದೆ. ಖಾಸಗಿ ಪ್ರಯಾಣಿಕರ ವಾಹನಗಳು ಅಂದರೆ, ವಾಣಿಜ್ಯ ಕಾರುಗಳು, ಟ್ಯಾಕ್ಸಿಗಳು ಸೇರಿದಂತೆ ಇನ್ನಿತರೆ ವಾಹನಗಳಿಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಅಳವಡಿಕೆಯನ್ನು ಕ್ಷಿಪ್ರಗತಿಯಲ್ಲಿ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದುವರೆಗೆ 1 ಲಕ್ಷಕ್ಕೂ ಅಧಿಕ ವಾಹನಗಳಿಗೆ ಈ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಇನ್ನುಳಿದ 4-5 ಲಕ್ಷ ವಾಹನಗಳಿಗೆ ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಅಳವಡಿಸಬೇಕೆಂದು ಅಧಿಕಾರಿಗಳಿಗೆ ಆದೇಶ ನೀಡಿದರು.

ಸಭೆಯಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಆಯುಕ್ತ ಸೆಲ್ವಮಣಿ ಸೇರಿದಂತೆ ನಾಲ್ಕೂ ನಿಗಮಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.

Related Articles

Comments (0)

Leave a Comment