ಕ್ರಿಸ್ ಮಸ್ ಪ್ರಯುಕ್ತ 1000 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದ ಕೆಎಸ್ಆರ್ಟಿಸಿ
- by Suddi Team
- December 19, 2025
- 7 Views
ಬೆಂಗಳೂರು: ಸಾಲು ಸಾಲು ರಜೆ,ಹಬ್ಬಗಳ ಸಂದರ್ಭದಲ್ಲಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುತ್ತಾ ಬಂದಿರುವ ಕರ್ನಾಟನ ರಾಜ್ಯ ರಸ್ತೆ ಸಾರಿಗೆ ನಿಗಮವು ಕ್ರಿಸ್ ಮಸ್ ರಜೆ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 1000 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಿದ್ದು, ಪ್ರಯಾಣಿಕರು ಬಸ್ ಗಳ ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದೆ
ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಡಿಸೆಂಬರ್ 19,20 ಹಾಗು 24 ರಂದು ಬೆಂಗಳೂರಿನಿಂದ ರಾಜ್ಯದ ಮತ್ತು ಹೊರರಾಜ್ಯದ ವಿವಿಧ ಸ್ಥಳಗಳಿಗೆ ಸಾವಿರ ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಮರಳಲು ಡಿಸೆಂಬರ್ 26ಮತ್ತು 28 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತದೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ ಎಂದು ತಿಳಿಸಿದೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.
ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.
ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ.
Related Articles
Thank you for your comment. It is awaiting moderation.


Comments (0)